T20 World Cup 2025: ಸತತ 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ವನಿತಾ ಪಡೆ
U19 Womens T20 World Cup 2025: ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ ಮಣಿಸಿದ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಮಲೇಷ್ಯಾ ರಾಜಧಾನಿ ಕೌಲಾಲಂಪುರದ ಬ್ಯೂಮಾಸ್ ಓವಲ್ ಸ್ಟೇಡಿಯಂನಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸುಲಭವಾಗಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಹಿಂದೆ 2023ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲೂ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 82 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ವನಿತಾ ಪಡೆ 11.2 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು.
82 ರನ್ಗಳಿಗೆ ಆಫ್ರಿಕಾ ಆಲೌಟ್
ಈ ಟೂರ್ನಿಯಲ್ಲಿ ಕನ್ನಡತಿ ನಿಕ್ಕಿ ಪ್ರಸಾದ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಂ ಇಂಡಿಯಾದ ಪ್ರದರ್ಶನ ಸ್ಮರಣೀಯವಾಗಿತ್ತು. ಅದಕ್ಕೆ ಪೂರಕವಾಗಿ ಭಾರತ ತಂಡ ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಪ್ರಶಸ್ತಿ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳ ನಡುವೆ ನಡೆದ ಈ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಆಫ್ರಿಕಾ ಮಹಿಳಾ ತಂಡ 20 ಓವರ್‌ಗಳಲ್ಲಿ ಕೇವಲ 82 ರನ್ಗಳಿಗೆ ಆಲೌಟ್ ಆಯಿತು. ತಂಡದ ಪರ ಮೈಕ್ ವ್ಯಾನ್ ವೂರ್ಸ್ಟ್ ಗರಿಷ್ಠ 23 ರನ್ ಗಳಿಸಿದರು. ಅವರನ್ನು ಹೊರತುಪಡಿಸಿ, ಗೆಮ್ಮಾ ಬೋಥಾ 16 ರನ್ ಮತ್ತು ಫೇ ಕೌಲಿಂಗ್ 15 ರನ್‌ಗಳ ಇನ್ನಿಂಗ್ಸ್ ಆಡಿದರು.
ಮತ್ತೊಂದೆಡೆ ಭಾರತ ಪರ ಬೌಲಿಂಗ್ನಲ್ಲಿ ಮಿಂಚಿದ ಗೊಂಗಡಿ ತ್ರಿಶಾ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್ ಪಡೆದರು. ಇವರಲ್ಲದೆ ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಮತ್ತು ಪರುಣಿಕಾ ಸಿಸೋಡಿಯಾ ತಲಾ 2 ವಿಕೆಟ್ ಪಡೆದರು. ಉಳಿದಂತೆ ಶಬ್ನಮ್ ಶಕೀಲ್ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಟೀಂ ಇಂಡಿಯಾಗೆ ಸುಲಭ ಜಯ
ಗೆಲುವಿಗೆ 83 ರನ್‌ಗಳ ಗುರಿ ಪಡೆದಿದ್ದ ಟೀಂ ಇಂಡಿಯಾಕ್ಕೆ ಆರಂಭಿಕರಾದ ಗೊಂಗಡಿ ತ್ರಿಶಾ ಮತ್ತು ಕಮಲಿನಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಉಭಯ ಆಟಗಾರರು ಮೊದಲ ವಿಕೆಟ್‌ಗೆ ಕೇವಲ 4.3 ಓವರ್‌ಗಳಲ್ಲಿ 36 ರನ್ ಕಲೆಹಾಕಿದರು. ಇದರಿಂದಾಗಿ ಭಾರತ ತಂಡ ಕೇವಲ 1 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು. ಕಾಕತಾಳೀಯವೆಂಬಂತೆ ಕಳೆದ ವರ್ಷ ನಡೆದಿದ್ದ ಪುರುಷರ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಆಗಲೂ ಟೀಂ ಇಂಡಿಯಾ ಗೆದ್ದಿತ್ತು.
ಭಾರತ ತಂಡದ ಪ್ರದರ್ಶನ ಹೀಗಿತ್ತು
ಈ ವಿಶ್ವಕಪ್ನಲ್ಲಿ ಟೀಂ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಲು ಯಾವ ತಂಡಕ್ಕೂ ಸಾಧ್ಯವಾಗಲಿಲ್ಲ. ಲೀಗ್ ಹಂತದ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದ್ದ ಭಾರತ ತಂಡ ಇದಾದ ನಂತರ ಮಲೇಷ್ಯಾವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. ನಂತರ ಶ್ರೀಲಂಕಾವನ್ನು 60 ರನ್‌ಗಳಿಂದ ಸೋಲಿಸಿದರೆ, ಬಾಂಗ್ಲಾದೇಶದ ವಿರುದ್ಧ 8 ವಿಕೆಟ್‌ಗಳಿಂದ ಮತ್ತು ಸ್ಕಾಟ್ಲೆಂಡ್ ವಿರುದ್ಧ 150 ರನ್‌ಗಳಿಂದ ಗೆದ್ದಿತು. ನಂತರ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದ ನಿಕಿ ಪಡೆ ಈಗ ಫೈನಲ್‌ನಲ್ಲಿಯೂ 9 ವಿಕೆಟ್ಗಳ ಸುಲಭ ಜಯ ದಾಖಲಿಸಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:10 pm, Sun, 2 February 25