
ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಪಾಲಿಗೆ ಕಿವೀಸ್ ಪಡೆ ಹಲವು ಬಾರಿ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ. ಅದು 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಆಗಿರಬಹುದು. ಇಲ್ಲ 2021ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಆಗಿರಬಹುದು. ಹೀಗೆ ಐಸಿಸಿ ಟೂರ್ನಿಗಳಲ್ಲಿ ಭಾರತದ ವಿರುದ್ಧ ನ್ಯೂಝಿಲೆಂಡ್ ಪಾರುಪತ್ಯ ಮೆರೆದ ಹಲವು ನಿದರ್ಶನಗಳಿವೆ. ಆದರೆ ಈ ಬಾರಿ ಹಾಗೆ ಆಗಲಿಲ್ಲ.
ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಭಾರತ ಬಗ್ಗು ಬಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಶ್ರೇಯಸ್ ಅಯ್ಯರ್ 77 ರನ್ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ 45 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 249 ರನ್ ಬಾರಿಸಿದರು.
250 ರನ್ಗಳ ಸಾಧಾರಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು ಈ ಬಾರಿ ಕೂಡ ಭಾರತಕ್ಕೆ ಸೋಲುಣಿಸಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಟೀಮ್ ಇಂಡಿಯಾದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಇಡೀ ಪಂದ್ಯದ ಚಿತ್ರಣ ಬದಲಿಸಿದರು.
10 ಓವರ್ಗಳಲ್ಲಿ ಕೇವಲ 42 ರನ್ ನೀಡಿದ ವರುಣ್ ಚಕ್ರವರ್ತಿ 5 ಪ್ರಮುಖ ವಿಕೆಟ್ ಕಬಳಿಸಿದರು. ಪರಿಣಾಮ 45.3 ಓವರ್ಗಳಲ್ಲಿ 205 ರನ್ಗಳಿಸಿ ನ್ಯೂಝಿಲೆಂಡ್ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ 44 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಝಿಲೆಂಡ್ ತಂಡಕ್ಕೆ ಸೋಲುಣಿಸಿದೆ. 2000 ರಲ್ಲಿ ಉಭಯ ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗಿದ್ದವು. ಈ ವೇಳೆ ಭಾರತ ತಂಡಕ್ಕೆ 4 ವಿಕೆಟ್ಗಳ ಸೋಲುಣಿಸಿ ನ್ಯೂಝಿಲೆಂಡ್ ಟ್ರೋಫಿ ಎತ್ತಿ ಹಿಡಿದಿತ್ತು.
ಇದಾದ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ಪಡೆಯನ್ನು ಸೋಲಿಸಲು ಟೀಮ್ ಇಂಡಿಯಾಗೆ ಸಾಧ್ಯವಾಗಿರಲಿಲ್ಲ. ಇದೀಗ ಬರೋಬ್ಬರಿ 25 ವರ್ಷಗಳ ಬಳಿಕ ಭಾರತೀಯ ಪಡೆ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದಿದೆ. ಈ ಮೂಲಕ 2 ದಶಕಗಳ ಹಳೆಯ ಲೆಕ್ಕವನ್ನು ಟೀಮ್ ಇಂಡಿಯಾ ಚುಕ್ತಾ ಮಾಡಿದೆ.
ಇದನ್ನೂ ಓದಿ: ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್ಗಳು
ಇನ್ನು ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡ ಮುಖಾಮುಖಿಯಾದರೆ, ಮಾರ್ಚ್ 5 ರಂದು ಜರುಗಲಿರುವ ಎರಡನೇ ಸೆಮಿಫೈನಲ್ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಲಿದೆ.