RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು ಈಗ ಉಲ್ಟಾ ಪಲ್ಟಾ
IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಗೆ ತೆರೆಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿ ಆರ್‌ಸಿಬಿ ಕಿರೀಟ ಮುಡಿಗೇರಿಸಿಕೊಂಡಿದೆ.

ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಪ್ ಗೆಲ್ಲಬಾರದು ಎಂದಿದ್ದ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು (Ambati Rayudu) ಇದೀಗ ಯೂ ಟರ್ನ್ ಹೊಡೆದಿದ್ದಾರೆ. ಅದು ಸಹ ಚಾಂಪಿಯನ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಭಿನಂದನೆ ಸಲ್ಲಿಸುವ ಮೂಲಕ ಎಂಬುದು ವಿಶೇಷ.
ಐಪಿಎಲ್ ಆರಂಭಕ್ಕೂ ಮುನ್ನ ಅಂಬಾಟಿ ರಾಯುಡು ಈ ಬಾರಿ ಆರ್‌ಸಿಬಿ ತಂಡ ಕಪ್ ಗೆಲ್ಲಬಾರದು ಎಂದಿದ್ದರು. ಎಸ್ ಬ್ರದಿನಾಥ್ ನಡೆಸಿದ ಚಿಟ್ ಚಾಟ್ನಲ್ಲಿ ಕಾಣಿಸಿಕೊಂಡಿದ್ದ ರಾಯುಡುಗೆ ಈ ಬಾರಿಯಾದರೂ ಆರ್‌ಸಿಬಿ ತಂಡದ ಕಾಯುವಿಕೆ ಕೊನೆಗೊಳ್ಳಲಿದೆಯಾ ಎಂದು ಪ್ರಶ್ನಿಸಲಾಗಿತ್ತು.
ಇದಕ್ಕೆ ನಗುತ್ತಾ ಉತ್ತರಿಸಿದ ರಾಯುಡು, ಈ ಸಲ ನನಗೆ ಆರ್‌ಸಿಬಿ ತಂಡ ಕಪ್ ಗೆಲ್ಲೋದು ಇಷ್ಟವಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದರು. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರುನಂತಹ ತಂಡ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು. ಹೀಗಾಗಿ ಆರ್ಸಿಬಿಯಂತಹ ತಂಡ ಐಪಿಎಲ್ನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ.
ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದರು.
ಇದಕ್ಕೂ ಮುನ್ನ ಪೋಡ್ ಕಾಸ್ಟ್ವೊಂದರಲ್ಲಿ ಮಾತನಾಡಿದ್ದ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಹಾಗೂ ಪ್ರಾರ್ಥಿಸುತ್ತೇನೆ ಎಂದಿದ್ದರು.
ಆದರೆ ಅಂಬಾಟಿ ರಾಯುಡು ಅವರ ಪ್ರಾರ್ಥನೆ ಫಲಿಸಲಿಲ್ಲ. ಅಹಮದಾಬಾದ್ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ದಾಖಲಿಸಿದೆ.
ಇದನ್ನೂ ಓದಿ: IPL 2025 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?
ಈ ಗೆಲುವಿನ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ RCB ತಂಡಕ್ಕೆ ಅಭಿನಂದನೆ ಸಲ್ಲಿಸಿ ಅಂಬಾಟಿ ರಾಯುಡು ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
Finally! Very Happy for Rcb and their amazing team and fans.. truly deserve it.. congratulations!!
— ATR (@RayuduAmbati) June 3, 2025
ಕೊನೆಗೂ! ಆರ್‌ಸಿಬಿ ಮತ್ತು ಅವರ ಅದ್ಭುತ ತಂಡ ಮತ್ತು ಅಭಿಮಾನಿಗಳಿಗೆ ತುಂಬಾ ಸಂತೋಷವಾಗಿದೆ.. ನಿಜವಾಗಿಯೂ ಅದಕ್ಕೆ ನೀವು ಅರ್ಹರು ಎಂದು ಚಾಂಪಿಯನ್ ಪಟ್ಟ ಅಲಂಕರಿಸಿ ಆರ್‌ಸಿಬಿ ತಂಡಕ್ಕೆ ಅಂಬಾಟಿ ರಾಯುಡು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Published On - 12:53 pm, Wed, 4 June 25
