IPL 2025: ಏನು ಮಾಡೋದು… ನಾವು ಅಂದುಕೊಂಡಂತೆ ಏನೂ ನಡೀತಿಲ್ಲ: ರುತುರಾಜ್ ಗಾಯಕ್ವಾಡ್
IPL 2025 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 183 ರನ್ ಬಾರಿಸಿದರೆ, ಸಿಎಸ್ಕೆ ತಂಡ 158 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.

IPL 2025: ಈ ಬಾರಿಯ ಐಪಿಎಲ್ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ತವರು ಮೈದಾನದಲ್ಲಿ ಬರೋಬ್ಬರಿ 16 ವರ್ಷಗಳ ಬಳಿಕ ಸೋಲನುಭವಿಸಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೆಎಲ್ ರಾಹುಲ್ ಉತ್ತಮ ಆರಂಭ ಒದಗಿಸಿದ್ದರು.
51 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್ನೊಂದಿಗೆ 3 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 77 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು.
184 ರನ್ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಅಲ್ಲದೆ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 25 ರನ್ಗಳಿಂದ ಸೋಲೊಪ್ಪಿಕೊಂಡಿತು.
ಈ ಸೋಲಿನ ಬಳಿಕ ಮಾತನಾಡಿದ ಸಿಎಸ್ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್, ಕಳೆದ ಕೆಲ ಪಂದ್ಯಗಳಿಂದ ನಾವು ಅಂದುಕೊಂಡಂತೆ ಏನೂ ಸಹ ನಡೆಯುತ್ತಿಲ್ಲ ಎಂದು ನಿರಾಸೆ ವ್ಯಕ್ತಪಡಿಸಿದ್ದಾರೆ. ನಾವು ಅಂದುಕೊಂಡಂತೆ ಗುರಿ ಮುಟ್ಟಲು ಸಾಧ್ಯವಾಗುತ್ತಿಲ್ಲ. ಚೇಸಿಂಗ್ ಅನ್ನು ಸುಧಾರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಇದಾಗ್ಯೂ ಸಾಧ್ಯವಾಗುತ್ತಿಲ್ಲ ಎಂದರು.
ಪ್ರತಿ ಪಂದ್ಯದಲ್ಲೂ ಗೆಲ್ಲಲು, ಅದರಲ್ಲೂ ಚೇಸಿಂಗ್ನಲ್ಲಿ ಜಯ ಸಾಧಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಆದರೆ ಗುರಿ ತಲುಪುತ್ತಿಲ್ಲ. ಇದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ ನಾವು ಪವರ್ಪ್ಲೇನಲ್ಲೇ ವಿಕೆಟ್ ಕಳೆದುಕೊಳ್ಳುತ್ತಿದ್ದೇವೆ. ಇದು ಕಳವಳಕಾರಿ ವಿಷಯ.
ಮೊದಲ 6 ಓವರ್ಗಳಲ್ಲಿ ವಿಕೆಟ್ ಕಳೆದುಕೊಳ್ಳದಂತೆ ಎಚ್ಚರಿಕೆವಹಿಸುವುದು ಅನಿವಾರ್ಯ. ಈ ಮೂಲಕ ಉತ್ತಮ ಆರಂಭ ಪಡೆಯಬೇಕಿದೆ. ಅಲ್ಲದೆ ಬೌಲಿಂಗ್ನಲ್ಲಿ ನಾವು 15-20 ರನ್‌ಗಳನ್ನು ಹೆಚ್ಚುವರಿಯಾಗಿ ನೀಡುತ್ತಿದ್ದೇವೆ. ಇದನ್ನು ಸರಿಯಪಡಿಸಬೇಕಾದ ಅವಶ್ಯಕತೆಯಿದೆ.
ಈ ತಪ್ಪುಗಳನ್ನು ತಿದ್ದಿಕೊಳ್ಳುವ ಮೂಲಕ ಮುಂದಿನ ಪಂದ್ಯದಲ್ಲಿ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.
ಇದನ್ನೂ ಓದಿ: IPL 2025: ಸೋಲಿನ ಬೆನ್ನಲ್ಲೇ ಕಣ್ಣೀರಿಟ್ಟ ಹಾರ್ದಿಕ್ ಪಾಂಡ್ಯ
ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಏಪ್ರಿಲ್ 8 ರಂದು ನಡೆಯಲಿರುವ ಈ ಪಂದ್ಯದ ಮೂಲಕ ಸಿಎಸ್ಕೆ ಪಡೆ ಮತ್ತೆ ಗೆಲುವಿನ ಲಯಕ್ಕೆ ಮರಳಲಿದೆಯಾ ಅಥವಾ ಸೋಲಿನ ಸರಮಾಲೆಯನ್ನು ಮುಂದುವರೆಸಲಿದೆಯಾ ಕಾದು ನೋಡಬೇಕಿದೆ.