IPL 2025: ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುವವರು ಯಾರು?
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಈ ಟೂರ್ನಿಯ ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲೇ ಜರುಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ಜರುಗಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಣಕ್ಕಿಳಿಯಲಿದೆ.
ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಿಂದ ನಿಷೇಧಕ್ಕೆ ಒಳಗಾಗಿದ್ದಾರೆ.
ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.
ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ಆಡುವ ಮೊದಲ ಪಂದ್ಯದಿಂದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಸಿಎಸ್ಕೆ ವಿರುದ್ಧದ ಮ್ಯಾಚ್ನಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.
ಇತ್ತ ಹಾರ್ದಿಕ್ ಪಾಂಡ್ಯ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅತ್ತ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಇದ್ದು, ಇವರಿಬ್ಬರಲ್ಲಿ ಯಾರಿಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಐಪಿಎಲ್ ಸ್ಲೋ ಓವರ್ ರೇಟ್ ನಿಯಮವೇನು?
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ, ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ ತಲಾ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.
ಅದರಂತೆ ಕಳೆದ ಸೀಸನ್ನಲ್ಲಿ ಮೂರು ಬಾರಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2025ರ ಮೊದಲ ಪಂದ್ಯದಿಂದ ನಿಷೇಧಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ..!