
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್ನ ನರೇಂಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ.
ಇದಾಗ್ಯೂ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಜವಾಬ್ದಾರಿಯುತ ಇನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ 42 ಎಸೆತಗಳಲ್ಲಿ 61 ರನ್ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಓವರ್ಗಳ ವೇಳೆ ಅಬ್ಬರಿಸಿದ ವಾಷಿಂಗ್ಟನ್ ಸುಂದರ್ 33 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 168 ರನ್ ಕಲೆಹಾಕಿತು.
169 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಮೊದಲ ಓವರ್ನಲ್ಲೇ ಟ್ರಾವಿಡ್ ಹೆಡ್ (0) ವಿಕೆಟ್ ಕಬಳಿಸಿ ಮೊದಲ ಯಶಸ್ಸು ತಂದುಕೊಟ್ಟರು.
ಇದರ ಬೆನ್ನಲ್ಲೇ ಕಗಿಸೊ ರಬಾಡ ಎಸೆತಗಳಲ್ಲಿ ಅಭಿಷೇಕ್ ಶರ್ಮಾ (6) ಹಾಗೂ ಇಶಾನ್ ಕಿಶನ್ (11) ಔಟಾದರು. ಈ ಆಘಾತದಿಂದ ಪಾರಾಗುವ ಮುನ್ನ ಸ್ಮರಣ್ ರವಿಚಂದ್ರನ್ (9) ಹಾಗೂ ಸಲೀಲ್ ಅರೋರಾ (16) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಹೆನ್ರಿಕ್ ಕ್ಲಾಸೆನ್ ಕೂಡ ವಿಕೆಟ್ ಕೈಚೆಲ್ಲಿದರು.
ಆ ಬಳಿಕ ಬಂದ ನಿತೀಶ್ ಕುಮಾರ್ ರೆಡ್ಡಿ 2 ರನ್ಗಳಿಸಿ ಔಟಾದರೆ, ಪ್ಯಾಟ್ ಕಮಿನ್ಸ್ 19 ರನ್ಗಳಿಸಿ ಇನಿಂಗ್ಸ್ ಕೊನೆಗೊಳಿಸಿದರು. ಪರಿಣಾಮ ಸನ್‌ರೈಸರ್ಸ್ ಹೈದರಾಬಾದ್ ತಂಡವು 14.5 ಓವರ್ಗಳಲ್ಲಿ ಕೇವಲ 86 ರನ್ಗಳಿಗೆ ಆಲೌಟ್ ಆಗಿದೆ.
ಇದನ್ನೂ ಓದಿ: ಇದುವೇ ನನ್ನ ಏಕೈಕ ಗುರಿ: ಮನದಿಂಗಿತ ಬಿಟ್ಟಿಟ್ಟ ಕೃನಾಲ್ ಪಾಂಡ್ಯ
ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 82 ರನ್ಗಳ ಭರ್ಜರಿ ಜಯ ಸಾಧಿಸಿ ಮತ್ತೆರಡು ಅಂಕಗಳನ್ನು ತನ್ನದಾಗಿಸಿಕೊಂಡಿದೆ. ಈ ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರಿದ್ದು, 16 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಕ್ ಕ್ಲಾಸೆನ್, ಸಲೀಲ್ ಅರೋರಾ, ನಿತೀಶ್ ಕುಮಾರ್ ರೆಡ್ಡಿ, ಸ್ಮರಣ್ ರವಿಚಂದ್ರನ್, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಈಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ನಿಶಾಂತ್ ಸಿಂಧು, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್.