ಐರ್ಲೆಂಡ್ ವಿರುದ್ಧದ ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ
Ireland vs India, 2nd T20I: ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಗಾಯಕ್ವಾಡ್ 43 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 58 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್ 21 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 38 ರನ್ ಚಚ್ಚಿದರೆ, ಶಿವಂ ದುಬೆ 16 ಎಸೆತಗಳಲ್ಲಿ ಅಜೇಯ 22 ರನ್ ಬಾರಿಸಿದರು.

ಡಬ್ಲಿನ್ನ ದಿ ವಿಲೇಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ತಂಡದ ನಾಯಕ ಪಾಲ್ ಸ್ಟಿರ್ಲಿಂಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಯಶಸ್ವಿ ಜೈಸ್ವಾಲ್ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 29 ರನ್ ಪೇರಿಸಿದ ಬಳಿಕ ಜೈಸ್ವಾಲ್ (18) ಔಟಾದರು.
ಆ ಬಳಿಕ ಬಂದ ತಿಲಕ್ ವರ್ಮಾ ಕೇವಲ 1 ರನ್ಗಳಿಸಿ ನಿರಾಸೆ ಮೂಡಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 40 ರನ್ ಚಚ್ಚಿದರು.
ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಗಾಯಕ್ವಾಡ್ 43 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 58 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್ 21 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 38 ರನ್ ಚಚ್ಚಿದರೆ, ಶಿವಂ ದುಬೆ 16 ಎಸೆತಗಳಲ್ಲಿ ಅಜೇಯ 22 ರನ್ ಬಾರಿಸಿದರು. ಇದರೊಂದಿಗೆ ಟೀಮ್ ಇಂಡಿಯಾ ಮೊತ್ತ 5 ವಿಕೆಟ್ ನಷ್ಟಕ್ಕೆ 185 ಕ್ಕೆ ಬಂದು ನಿಂತಿತು.
186 ರನ್ಗಳ ಕಠಿಣ ಗುರಿ ಪಡೆದ ಐರ್ಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಪವರ್ಪ್ಲೇನಲ್ಲೇ 28 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆದರೆ ಈ ಹಂತದಲ್ಲಿ ಏಕಾಂಗಿ ಹೋರಾಟ ಮುಂದುವರೆಸಿದ ಆಂಡ್ರ್ಯೂ ಬಾಲ್ಬಿರ್ನಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.
ಟೀಮ್ ಇಂಡಿಯಾ ಬೌಲರ್ಗಳ ಬೆಂಡೆತ್ತಿದ ಆಂಡ್ರ್ಯೂ ಬಾಲ್ಬಿರ್ನಿ 51 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 72 ರನ್ ಚಚ್ಚಿದರು. ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇನ್ನು ಕೊನೆಯ ಹಂತದಲ್ಲಿ ಮಾರ್ಕ್ ಅಡೈರ್ 23 ರನ್ಗಳನ್ನು ಬಾರಿಸಿದರು. ಇದಾಗ್ಯೂ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 33 ರನ್ಗಳಿಂದ ಐರ್ಲೆಂಡ್ ತಂಡವು ಸೋಲೊಪ್ಪಿಕೊಂಡಿತು.
ಇತ್ತ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ವಶಪಡಿಸಿಕೊಂಡಿದೆ. ಬುಧವಾರ 3ನೇ ಟಿ20 ಪಂದ್ಯ ನಡೆಯಲಿದ್ದು, ಆದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಹೀಗಾಗಿ ಹೊಸ ಆಟಗಾರರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.
ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್.
ಇದನ್ನೂ ಓದಿ: ಏಷ್ಯಾಕಪ್ಗೆ 17 ಸದಸ್ಯರ ಸಂಭಾವ್ಯ ಟೀಮ್ ಇಂಡಿಯಾ ಹೀಗಿದೆ
ಐರ್ಲೆಂಡ್ (ಪ್ಲೇಯಿಂಗ್ XI): ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್(ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್.
Published On - 10:56 pm, Sun, 20 August 23