
ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ (Team India) ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮೂರು ಬದಲಾವಣೆ ಮಾಡುವುದು ಬಹುತೇಕ ಖಚಿತ. ಏಕೆಂದರೆ ಈ ಪಂದ್ಯದಕ್ಕೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಹೀಗಾಗಿ ಅವರ ಬದಲಿಗೆ ಮತ್ತೋರ್ವ ವಿಕೆಟ್ ಕೀಪರ್ ಕಣಕ್ಕಿಳಿಯುವುದು ಖಚಿತ.
ಕಳೆದ ಎರಡು ಪಂದ್ಯಗಳಲ್ಲಿ ಗಾಯದಿಂದ ಬಳಲುತ್ತಿದ್ದ ರಿಷಭ್ ಪಂತ್ ಬದಲಿಯಾಗಿ ಧ್ರುವ್ ಜುರೇಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದ್ದರು. ಹೀಗಾಗಿ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಐದನೇ ಪಂದ್ಯದ ಪ್ಲೇಯಿಂಗ್ ಇಲೆವೆನ್ನಲ್ಲಿ ವಿಕೆಟ್ ಕೀಪರ್ ಆಗಿ ಧ್ರುವ್ ಜುರೇಲ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ತೊಡೆಸಂದು ನೋವಿನ ಕಾರಣ ಕಳೆದ ಪಂದ್ಯದಲ್ಲಿ ಆಕಾಶ್ ದೀಪ್ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಸಂಪೂರ್ಣ ಫಿಟ್ ಆಗಿದ್ದು, ಐದನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಹೀಗಾಗಿ ಅವರು ಸಹ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬರ್ಮಿಂಗ್ಹ್ಯಾಮ್ ಹಾಗೂ ಲಾರ್ಡ್ಸ್ ಟೆಸ್ಟ್ನಲ್ಲಿ ಕಣಕ್ಕಿಳಿದಿದ್ದ ಆಕಾಶ್ ದೀಪ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಓವಲ್ ಮೈದಾನದಲ್ಲಿ ನಡೆಯಲಿರುವ ಕೊನೆಯ ಟೆಸ್ಟ್ ಪಂದ್ಯದಲ್ಲಿ ಅವರಿಗೆ ಮತ್ತೆ ಅವಕಾಶ ನೀಡಲಿದ್ದಾರೆ. ಇತ್ತ ಆಕಾಶ್ ದೀಪ್ ಎಂಟ್ರಿಯಿಂದಾಗಿ ಕಳೆದ ಮ್ಯಾಚ್ನಲ್ಲಿ ಕಣಕ್ಕಿಳಿದಿದ್ದ ಅನ್ಶುಲ್ ಕಂಬೋಜ್ ಪ್ಲೇಯಿಂಗ್ ಇಲೆವೆನ್ನಿಂದ ಹೊರಬೀಳಲಿದ್ದಾರೆ.
ಹಾಗೆಯೇ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ ಸಹ ಕಣಕ್ಕಿಳಿಯಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕಳೆದ ನಾಲ್ಕು ಮ್ಯಾಚ್ಗಳಲ್ಲಿ ಬೆಂಚ್ ಕಾದಿದ್ದ ಅನುಭವಿ ಸ್ಪಿನ್ನರ್ಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಹೀಗಾಗಿ ಅವರು ಸಹ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕುಲ್ದೀಪ್ ಯಾದವ್ಗೆ ಅವಕಾಶ ಕಲ್ಪಿಸಲು ಭಾರತದ ಪ್ಲೇಯಿಂಗ್ ಇಲೆವೆನ್ನಿಂದ ಶಾರ್ದೂಲ್ ಠಾಕೂರ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಾರ್ದೂಲ್ 11 ಓವರ್ಗಳಲ್ಲಿ 55 ರನ್ ನೀಡಿದ್ದರು. ಇದಾಗ್ಯೂ ವಿಕೆಟ್ ಪಡೆದಿರಲಿಲ್ಲ. ಹೀಗಾಗಿ ಅವರ ಬದಲಿಗೆ ಕುಲ್ದೀಪ್ ಯಾದವ್ಗೆ ಚಾನ್ಸ್ ನೀಡಬಹುದು.
ಐದನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಒಂದು ವೇಳೆ ಬುಮ್ರಾ ಹೊರಗುಳಿದರೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಕಣಕ್ಕಿಳಿಸಬಹುದು.
ಅಂದರೆ ಬುಮ್ರಾ ಕೊನೆಯ ಟೆಸ್ಟ್ ಪಂದ್ಯದಿಂದ ಹೊರಗುಳಿದರೆ, ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ 4 ಬದಲಾವಣೆ ಕಂಡು ಬರಬಹುದು. ಇಲ್ಲದಿದ್ದರೆ ಟೀಮ್ ಇಂಡಿಯಾ 3 ಬದಲಾವಣೆಯೊಂದಿಗೆ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ.
ಇದನ್ನೂ ಓದಿ: ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ