IND vs USA: ಪ್ರಮುಖ ವೇಗಿ ಅಲಭ್ಯ: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

T20 World Cup 2026 India vs USA: ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಯುಎಸ್​ಎ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

IND vs USA: ಪ್ರಮುಖ ವೇಗಿ ಅಲಭ್ಯ: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ
Team India

Updated on: Feb 07, 2026 | 1:08 PM

ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ದ್ವಿತೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಇಂದೇ ನಡೆಯಲಿರುವ ಮೂರನೇ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ಜ್ವರದಿಂದ ಬಳಲುತ್ತಿದ್ದು, ಹೀಗಾಗಿ ಯುಎಸ್​ಎ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಖಚಿತ.

ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ:

ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದ್ದು, ಹೀಗಾಗಿ ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ಕಣಕ್ಕಿಳಿಸಬಹುದು.

ಹರ್ಷಿತ್ ರಾಣಾ ಗಾಯಗೊಂಡು ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಇದೀಗ ಸಿರಾಜ್ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಅದರಂತೆ ಬುಮ್ರಾ ಹೊರಗುಳಿದರೆ ಮೊಹಮ್ಮದ್ ಸಿರಾಜ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಖಚಿತ.

ಹಾಗೆಯೇ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್​ಗೆ ಇಂದಿನ ಮ್ಯಾಚ್​ನಲ್ಲಿ ಅವಕಾಶ ಸಿಗುವುದಿಲ್ಲ. ಬದಲಾಗಿ ಅಭಿಷೇಕ್ ಶರ್ಮಾ ಜೊತೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ತಿಲಕ್ ವರ್ಮಾ ಹೊರಗುಳಿದಿದ್ದ ಕಾರಣ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಇದೀಗ ತಿಲಕ್ ತಂಡಕ್ಕೆ ರಿಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಭರ್ಜರಿ ಫಾರ್ಮ್​ನಲ್ಲಿರುವ ಇಶಾನ್ ಕಿಶನ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸುವುದು ಖಚಿತ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಅಭಿಷೇಕ್ ಶರ್ಮಾ
  • ಇಶಾನ್ ಕಿಶನ್
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್
  • ಹಾರ್ದಿಕ್ ಪಾಂಡ್ಯ
  • ಶಿವಂ ದುಬೆ
  • ಅಕ್ಷರ್ ಪಟೇಲ್
  • ರಿಂಕು ಸಿಂಗ್
  • ಅರ್ಷದೀಪ್ ಸಿಂಗ್
  • ಮೊಹಮ್ಮದ್ ಸಿರಾಜ್
  • ವರುಣ್ ಚಕ್ರವರ್ತಿ

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ ಮೂವರಿಲ್ಲ… ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್.