ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಅಂದರೆ 2025 ರ ಫೆಬ್ರವರಿ ಮತ್ತು ಮಾರ್ಚ್ ನಡುವೆ ಪಾಕಿಸ್ತಾನದಲ್ಲಿ ಆಯೋಜನೆಗೊಳ್ಳಲಿದೆ. ಈ ಐಸಿಸಿ ಈವೆಂಟ್ನಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುತ್ತದೋ ಅಥವಾ ಇಲ್ಲವೋ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಸದ್ಯದ ಪರಿಸ್ಥಿತಿ ನೋಡಿದರೆ, ಭಾರತ ಸರ್ಕಾರ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಅನುಮತಿ ನೀಡುವ ಸಾಧ್ಯತೆಗಳಿಲ್ಲ. ಇತ್ತ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಕರೆಸುವ ಜವಬ್ದಾರಿಯನ್ನು ಪಿಸಿಬಿ, ಐಸಿಸಿ ಹೆಗಲಿಗೆ ಹೊರಿಸಿದೆ. ಹೀಗಾಗಿ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪ್ರೇಮಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಆದರೆ ಈ ನಡುವೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೌನ ಮುರಿದಿದ್ದಾರೆ. ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಜಯ್ ಶಾ ಈ ವಿಷಯದ ಬಗ್ಗೆ ಹೇಳಿಕೆ ನೀಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುತ್ತದೋ ಇಲ್ಲವೋ ಎಂಬ ಪ್ರಶ್ನೆಗೆ ಜಯ್ ಶಾ ಉತ್ತರಿಸಿದ್ದು, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಟೂರ್ನಿ ಹತ್ತಿರ ಬಂದಾಗ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಯ್ ಶಾ ಹೇಳಿದ್ದಾರೆ.
ಐಸಿಸಿಗೆ ಪಾಕಿಸ್ತಾನ ಸಲ್ಲಿಸಿದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯ ಪ್ರಕಾರ, ಈ ಪಂದ್ಯಾವಳಿಯನ್ನು 19 ಫೆಬ್ರವರಿ 2025 ರಿಂದ ಮಾರ್ಚ್ 9 ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಅದೇ ಸಮಯದಲ್ಲಿ, ಈ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ಪಂದ್ಯವನ್ನು ಮಾರ್ಚ್ 1 ರಂದು ನಡೆಸಲು ತೀರ್ಮಾನಿಸಲಾಗಿದೆ. ಆದರೆ ಪಾಕಿಸ್ತಾನ, ಐಸಿಸಿಗೆ ಸಲ್ಲಿಸಿರುವ ಕರಡು ವೇಳಾಪಟ್ಟಿಯನ್ನು ಐಸಿಸಿ ಇಲ್ಲಿಯವರೆಗೆ ಅನುಮೋದಿಸಿಲ್ಲ.
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಇದು ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಬಾಂಗ್ಲಾದೇಶ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ತಂಡಗಳನ್ನು ಒಳಗೊಂಡಿದೆ. ಈ ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಮೊದಲ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳಿದ್ದರೆ, ಎರಡನೇ ಗುಂಪಿನಲ್ಲಿ ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೇರಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ