
ಏಕದಿನ ಕ್ರಿಕೆಟ್ನಲ್ಲಿ ಜೋ ರೂಟ್ (Joe Root) ಭರ್ಜರಿ ಪ್ರದರ್ಶನ ಮುಂದುವರೆದಿದೆ. ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ರೂಟ್ ಏಕದಿನ ಕ್ರಿಕೆಟ್ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 47,4 ಓವರ್ಗಳಲ್ಲಿ 308 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಪರ ರೂಟ್ ಆಕರ್ಷಕ ಶತಕ ಬಾರಿಸಿದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರೂಟ್ ಆ ಬಳಿಕ ರನ್ ಗತಿಯನ್ನು ಹೆಚ್ಚಿಸಿದರು.
ಪರಿಣಾಮ ಜೋ ರೂಟ್ ಬ್ಯಾಟ್ನಿಂದ ಶತಕ ಮೂಡಿಬಂತು. ಅಲ್ಲದೆ 139 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 21 ಫೋರ್ಗಳೊಂದಿಗೆ ಅಜೇಯ 166 ರನ್ ಬಾರಿಸಿ ಇಂಗ್ಲೆಂಡ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ 166 ರನ್ಗಳೊಂದಿಗೆ ರೂಟ್ ಇಂಗ್ಲೆಂಡ್ ಪರ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮೊರ್ಗನ್ ಹೆಸರಿನಲ್ಲಿತ್ತು. ಇಂಗ್ಲೆಂಡ್ ಪರ 207 ಇನಿಂಗ್ಸ್ಗಳನ್ನು ಆಡಿದ್ದ ಮೊರ್ಗನ್ 6957 ರನ್ಗಳನ್ನು ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಜೋ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಇಂಗ್ಲೆಂಡ್ ಪರ ಈವರೆಗೆ 168 ಏಕದಿನ ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 7082 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ 7 ಸಾವಿರ ರನ್ ಕಲೆಹಾಕಿದ ಇಂಗ್ಲೆಂಡ್ನ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಡಿಐ ಕ್ರಿಕೆಟ್ನಲ್ಲಿ 300+ ಚೇಸಿಂಗ್ ವೇಳೆ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
ಈ ಪಟ್ಟಿಯಲ್ಲಿ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 300+ ಚೇಸಿಂಗ್ ವೇಳೆ ಒಟ್ಟು 9 ಶತಕಗಳನ್ನು ಬಾರಿಸಿದ್ದಾರೆ. ಇದೀಗ 6ನೇ ಶತಕ ಸಿಡಿಸುವ ಮೂಲಕ ಜೋ ರೂಟ್ ಈ ವಿಶ್ವ ದಾಖಲೆಯ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಗೆಯೇ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 7 ಸಾವಿರ ರನ್ ಪೂರೈಸಿದ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 150 ಇನಿಂಗ್ಸ್ಗಳ ಮೂಲಕ 7000 ರನ್ ಕಲೆಹಾಕಿದ ಸೌತ್ ಆಫ್ರಿಕಾದ ಹಾಶಿಮ್ ಆಮ್ಲ ಅಗ್ರಸ್ಥಾನದಲ್ಲಿದ್ದರೆ, ಇದೀಗ 168 ಇನಿಂಗ್ಸ್ಗಳ ಮೂಲಕ ಈ ಸಾಧನೆಗೈದು ರೂಟ್ 5ನೇ ಸ್ಥಾನ ಅಲಂಕರಿಸಿದ್ದಾರೆ.
ಇದರ ಜೊತೆಗೆ ಒಂದೇ ತಂಡದ ವಿರುದ್ಧ ಒಡಿಐ ಕ್ರಿಕೆಟ್ನಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ಇಂಗ್ಲೆಂಡ್ ಬ್ಯಾಟರ್ನ ದಾಖಲೆ ಕೂಡ ರೂಟ್ ಪಾಲಾಗಿದೆ. ಜೋ ರೂಟ್ ವೆಸ್ಟ್ ಇಂಡೀಸ್ ವಿರುದ್ಧ ಈವರೆಗೆ 5 ಶತಕಗಳನ್ನು ಬಾರಿಸಿದ್ದು, ಈ ಮೂಲಕ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಡೌಟ್
ಒಟ್ಟಿನಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗಿದ್ದ ಜೋ ರೂಟ್ ಏಕದಿನ ಕ್ರಿಕೆಟ್ನಲ್ಲೂ ಹಲವು ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆಯುವಲ್ಲಿ ನಿರತವಾಗಿದ್ದಾರೆ. ಈ ದಾಖಲೆಗಳೊಂದಿಗೆ ರೂಟ್ ಹೆಸರು ಮತ್ತಷ್ಟು ವರ್ಷ ಕ್ರಿಕೆಟ್ ಪುಟಗಳಲ್ಲಿ ರಾರಾಜಿಸಲಿರುವುದನ್ನು ನಿರೀಕ್ಷಿಸಬಹುದು.