ದಾಖಲೆಯ ಶತಕದೊಂದಿಗೆ ವಿಶ್ವ ದಾಖಲೆಯತ್ತ ಮುನ್ನುಗ್ಗಿದ ಜೋ ರೂಟ್
Australia vs England, 5th Test: ಆ್ಯಶಸ್ ಸರಣಿಯ 5ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಶತಕದ ನೆರವಿನೊಂದಿಗೆ ಪ್ರಥಮ ಇನಿಂಗ್ಸ್ನಲ್ಲಿ 384 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಆಸ್ಟ್ರೇಲಿಯಾ ತಂಡ 22 ಓವರ್ಗಳ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 112 ರನ್ ಕಲೆಹಾಕಿದೆ.

ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 57 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಗೆ ಮರಳಿದ್ದರು.
ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್, ಹ್ಯಾರಿ ಬ್ರೂಕ್ ಜೊತೆಗೂಡಿ ಇನಿಂಗ್ಸ್ ಕಟ್ಟಿದರು. ಪರಿಣಾಮ 5ನೇ ವಿಕೆಟ್‌ಗೆ 169 ರನ್ ಗಳ ಜೊತೆಯಾಟ ಮೂಡಿಬಂತು.
ಇದರ ನಡುವೆ 97 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ 84 ರನ್ ಬಾರಿಸಿದ ಹ್ಯಾರಿ ಬ್ರೂಕ್ ಔಟಾದರು. ಇದಾಗ್ಯೂ ಮತ್ತೊಂದೆಡೆ ಜವಾಬ್ದಾರಿಯುತ ಇನಿಂಗ್ಸ್ ಕಟ್ಟಿದ ಜೋ ರೂಟ್ ಆಕರ್ಷಕ ಶತಕ ಪೂರೈಸಿದರು.
ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್.
- ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 51 ಶತಕ ಬಾರಿಸಿದ್ದಾರೆ.
- ಸೌತ್ ಆಫ್ರಿಕಾದ ಜಾಕ್ಸ್ ಕಾಲಿಸ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಒಟ್ಟು 45 ಸೆಂಚುರಿ ಸಿಡಿಸಿದ್ದಾರೆ.
- ಜೋ ರೂಟ್ 41 ಟೆಸ್ಟ್ ಶತಕಗಳೊಂದಿಗೆ ಇದೀಗ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ 242 ಎಸೆತಗಳನ್ನು ಎದುರಿಸಿದ ಜೋ ರೂಟ್ 15 ಫೋರ್ ಗಳೊಂದಿಗೆ ಒಟ್ಟು 160 ರನ್ ಕಲೆಹಾಕಿದರು. 160 ರನ್ ಗಳೊಂದಿಗೆ ಟೆಸ್ಟ್ ಕ್ರಿಕೆಟ್ ನ ರನ್ ಸಂಖ್ಯೆಯನ್ನು 13937 ಕ್ಕೇರಿಸಿದ್ದಾರೆ.
ಇದನ್ನೂ ಓದಿ: ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್
ಜೋ ರೂಟ್ ಇನ್ನು 1984 ರನ್ ಗಳಿಸಿದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ದಾಖಲೆಗಳ ಸರದಾರ ಸಚಿನ್ ತೆಂಡೂಲ್ಕರ್. ಸಚಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 15921 ರನ್ ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಇಂಗ್ಲೆಂಡ್ ಆಲೌಟ್:
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಶತಕದ ನೆರವಿನೊಂದಿಗೆ ಒಟ್ಟು 384 ರನ್ ಗಳಿಸಿ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರ ಮೈಕೆಲ್ ನೇಸರ್ 4 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಹಾಗೂ ಸ್ಕಾಟ್ ಬೋಲ್ಯಾಂಡ್ ತಲಾ 2 ವಿಕೆಟ್ ಕಬಳಿಸಿದ್ದಾರೆ.
Published On - 11:26 am, Mon, 5 January 26
