ಆಸ್ಟ್ರೇಲಿಯಾ ವಿರುದ್ಧ ಸತತ ಐದು ಟೆಸ್ಟ್ ಪಂದ್ಯಗಳನ್ನು ಆಡಿದ ಟೀಂ ಇಂಡಿಯಾ ಇದೀಗ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಸತತ ಎಂಟು ಪಂದ್ಯಗಳನ್ನು ಆಡಬೇಕಿದೆ. ಮೊದಲು ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟಿ-20 ಸರಣಿ ನಡೆಯಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆದರೆ, ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಇನ್ನೂ ಪ್ರಕಟವಾಗಿಲ್ಲ. ಏತನ್ಮಧ್ಯೆ, ಏಕದಿನ ಸರಣಿಯಲ್ಲಿ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅವರಿಗೆ ಅವಕಾಶ ನೀಡಲಾಗುತ್ತದೆ ಎಂಬ ದೊಡ್ಡ ಸುದ್ದಿ ಬರುತ್ತಿದೆ. ಈ ಹಿಂದೆ ಏಕದಿನ ಸರಣಿಯಲ್ಲಿ ಅವರಿಗೆ ವಿಶ್ರಾಂತಿ ನೀಡುವ ಬಗ್ಗೆ ಚರ್ಚೆ ನಡೆದಿತ್ತು. ಆದರೀಗ ಹಠಾತ್ ಯು-ಟರ್ನ್ ತೆಗೆದುಕೊಂಡಿರುವ ಬಿಸಿಸಿಐ, ಚಾಂಪಿಯನ್ಸ್ ಟ್ರೋಫಿಯನ್ನು ಗಮನದಲ್ಲಿಟ್ಟುಕೊಂಡು ರಾಹುಲ್ರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕೆಎಲ್ ರಾಹುಲ್ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ, ರಾಹುಲ್ ಏಕದಿನ ಸರಣಿಯಲ್ಲಿ ಆಡುವುದು ಖಚಿತ ಎಂದು ಹೇಳಲಾಗುತ್ತಿದೆ. ಈ ಹಿಂದೆ ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿದ ವರದಿಗಳಲ್ಲಿ ರಾಹುಲ್‌ಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಇದೀಗ ಅವರಿಗೆ ಏಕದಿನ ಸರಣಿಯಲ್ಲಿ ಅವಕಾಶ ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಬಿಸಿಸಿಐ ತನ್ನ ಹಿಂದಿನ ನಿರ್ಧಾರವನ್ನು ಮರುಪರಿಶೀಲಿಸಿದ್ದು, ಇದೀಗ ಏಕದಿನ ಸರಣಿಯಲ್ಲಿ ಆಡುವಂತೆ ರಾಹುಲ್ರನ್ನು ಕೇಳಿಕೊಂಡಿದೆ. ಇದರಿಂದಾಗಿ ಫೆಬ್ರವರಿಯಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಗೂ ಮೊದಲು ಕೆಲವು ಪಂದ್ಯಗಳನ್ನು ಆಡುವ ಮೂಲಕ ರಾಹುಲ್ ಸಿದ್ಧವಾಗಲಿ ಎಂಬುದು ಇದರ ಹಿಂದಿನ ಉದ್ದೇಶ ಎಂದು ಹೇಳಲಾಗುತ್ತಿದೆ.
ಬಿಸಿಸಿಐ ಈ ಹಿಂದೆ ತೆಗೆದುಕೊಂಡ ನಿರ್ಧಾರದಿಂದಾಗಿ ಕೆಎಲ್ ರಾಹುಲ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದು ಅನುಮಾನ ಎಂದು ತೋರುತ್ತಿತ್ತು. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ, ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಆಡಲು ದುಬೈಗೆ ಹೋಗಲಿದೆ. ಚಾಂಪಿಯನ್ಸ್ ಟ್ರೋಫಿ ಕೂಡ ಏಕದಿನ ಮಾದರಿಯಲ್ಲಿ ನಡೆಯಲಿದೆ. ಹೀಗಿರುವಾಗ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ರಾಹುಲ್‌ಗೆ ಅವಕಾಶ ನೀಡದಿದ್ದರೆ ಅವರ ಸ್ಥಾನದಲ್ಲಿ ಬೇರೆ ಆಟಗಾರನಿಗೆ ಅವಕಾಶ ಸಿಗಬಹುದು ಎನ್ನಲಾಗುತ್ತಿತ್ತು. ಆದರೀಗ ರಾಹುಲ್ರನ್ನು ಏಕದಿನ ಸರಣಿಗೆ ಆಯ್ಕೆ ಮಾಡುವ ಮೂಲಕ ಚಾಂಪಿಯನ್ಸ್ ಟ್ರೋಫಿಗೆ ಅವರ ಆಯ್ಕೆಯನ್ನು ಖಚಿತಪಡಿಸಿದಂತ್ತಾಗಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿದೆ. ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಭಾರತದ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಈ ಐಸಿಸಿ ಟೂರ್ನಿಗೆ ಭಾರತ ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಶೀಘ್ರದಲ್ಲೇ ಆಯ್ಕೆಗಾರರು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ತಂಡವನ್ನು ಪ್ರಕಟಿಸಲಿದ್ದು, ವಾರದ ನಂತರ ಏಕದಿನ ಸರಣಿ ಹಾಗೂ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಪ್ರಕಟಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ