ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ (KL Rahul) ವಿಕೆಟ್ ಕೀಪಿಂಗ್ ಮಾಡುವುದಿಲ್ಲ ಎಂದು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಸ್ ಸ್ಪಷ್ಟಪಡಿಸಿದ್ದಾರೆ. ಐದು ಪಂದ್ಯಗಳ ಈ ಸರಣಿಯಲ್ಲಿ ಕೆಎಲ್ಆರ್ ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ತಂಡದಲ್ಲಿರುವ ಇಬ್ಬರು ವಿಕೆಟ್ ಕೀಪರ್ಗಳಲ್ಲಿ ಒಬ್ಬರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಸಿಗಲಿದೆ ಎಂದು ಭಾರತ ತಂಡದ ಕೋಚ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, ರಾಹುಲ್ ಈ ಸರಣಿಯಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಆಗಿ ಕಾಣಿಸಿಕೊಳ್ಳುವುದಿಲ್ಲ. ಆಯ್ಕೆಯಲ್ಲಿಯೇ ನಾವು ಅದನ್ನು ಸ್ಪಷ್ಟಪಡಿಸಿದ್ದೇವೆ. ಇದಕ್ಕಾಗಿಯೇ ತಂಡದಲ್ಲಿ ಇನ್ನಿಬ್ಬರು ವಿಕೆಟ್ ಕೀಪರ್‌ಗಳನ್ನು ಆಯ್ಕೆ ಮಾಡಿದ್ದೇವೆ ಎಂದು ರಾಹುಲ್ ದ್ರಾವಿಡ್ ಹೇಳಿದರು.
ನಿಸ್ಸಂಶಯವಾಗಿ ಕೆಎಲ್ ರಾಹುಲ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ವಿಕೆಟ್ ಕೀಪಿಂಗ್ ಜೊತೆ ಬ್ಯಾಟಿಂಗ್ನಲ್ಲೂ ರಾಹುಲ್ ಮಿಂಚಿದ್ದರು. ಇದರಿಂದಾಗಿ ನಾವು ಸರಣಿಯನ್ನು ಡ್ರಾ ಮಾಡಿಕೊಳ್ಳಲು ಸಾಧ್ಯವಾಯಿತು. ಆದರೆ ಈ ಬಾರಿ ಅವರನ್ನು ನಾವು ಕೇವಲ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ ಎಂದು ರಾಹುಲ್ ದ್ರಾವಿಡ್ ತಿಳಿಸಿದರು.
ಕೆಎಲ್ ರಾಹುಲ್ ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ವಿಕೆಟ್ ಕೀಪಿಂಗ್ ಮೂಲಕ ಮಿಂಚಿದ್ದರು. ಇದಾಗ್ಯೂ ಟೆಸ್ಟ್ ಕ್ರಿಕೆಟ್ನಲ್ಲಿ ಅವರು ವಿಕೆಟ್ ಹಿಂದೆ ಕಾಣಿಸಿಕೊಂಡಿರಲಿಲ್ಲ. ಆದರೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಅವರು ದೀರ್ಘಾವಧಿ ಕ್ರಿಕೆಟ್ನಲ್ಲೂ ವಿಕೆಟ್ ಕೀಪಿಂಗ್ ಮಾಡಬಲ್ಲೆ ಎಂಬುದನ್ನು ನಿರೂಪಿಸಿದ್ದರು. ಆದರೀಗ ಅವರನ್ನು ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ. ಹೀಗಾಗಿ ಕೆಎಲ್ ರಾಹುಲ್ ಮುಂಬರುವ ಟೆಸ್ಟ್ ಸರಣಿಗಳಲ್ಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದು ಅನುಮಾನ.
ಏಕೆಂದರೆ ಅಪಘಾತದಿಂದ ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಐಪಿಎಲ್ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ. ಪಂತ್ ಆಗಮನದೊಂದಿಗೆ ಟೀಮ್ ಇಂಡಿಯಾದ ವಿಕೆಟ್ ಕೀಪಿಂಗ್ ಜವಾಬ್ದಾರಿ ಮತ್ತೆ ಅವರಿಗೆ ಒಲಿಯಲಿದೆ. ಹಾಗಾಗಿ ಟೆಸ್ಟ್ ಕ್ರಿಕೆಟ್ನಲ್ಲಿ ಕೆಎಲ್ ರಾಹುಲ್ ಮತ್ತೊಮ್ಮೆ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ತುಂಬಾ ಕ್ಷೀಣ ಎನ್ನಬಹುದು.
ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್ಗಳು ಕಾಣಿಸಿಕೊಂಡಿದ್ದಾರೆ. ಇಲ್ಲಿ ಕೆಎಸ್ ಭರತ್ ಅನುಭವಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದರೆ, ಅತ್ತ 23 ವರ್ಷದ ಧ್ರುವ್ ಜುರೇಲ್ ಚೊಚ್ಚಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಯಾರಿಗೆ ಮಣೆ ಹಾಕಲಿದೆ ಎಂಬುದೇ ಈಗ ಕುತೂಹಲ.
ಇದನ್ನೂ ಓದಿ: Virat Kohli: ಮೈದಾನಕ್ಕಿಳಿಯದೇ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ
ಭಾರತ ಟೆಸ್ಟ್ ತಂಡ (ಮೊದಲೆರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.