ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಶತಕ ಜೊತೆಯಾಟವಾಡಿದ್ದಾರೆ. ಇದು 20 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾ ಆರಂಭಿಕರಿಬ್ಬರು ಕಲೆಹಾಕಿದ ಶತಕದ ಜೊತೆಯಾಟ ಎಂಬುದು ವಿಶೇಷ.
ಕೊನೆಯ ಬಾರಿಗೆ ಆಸ್ಟ್ರೇಲಿಯಾದಲ್ಲಿ ಭಾರತೀಯ ಆರಂಭಿಕರಿಬ್ಬರು ಶತಕದ ಜೊತೆಯಾಟವಾಡಿದ್ದು 2004 ರ ಟೆಸ್ಟ್ನಲ್ಲಿ. ಸಿಡ್ನಿಯಲ್ಲಿ ನಡೆದ ಈ ಟೆಸ್ಟ್ನಲ್ಲಿ ಭಾರತದ ಪರ ಇನಿಂಗ್ಸ್ ಆರಂಭಿಸಿದ ಆಕಾಶ್ ಚೋಪ್ರಾ ಹಾಗೂ ವೀರೇಂದ್ರ ಸೆಹ್ವಾಗ್ 123 ರನ್ ಬಾರಿಸಿದ್ದರು. ಇದಾದ ಬಳಿಕ ಟೀಮ್ ಇಂಡಿಯಾ ಒಪನರ್ಗಳು ಜೊತೆಗೂಡಿ 100 ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ.
ಇದೀಗ 20 ವರ್ಷಗಳ ಬಳಿಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ನಲ್ಲಿ ಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾಗೆ ಭರ್ಜರಿ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಕೆಎಲ್ ರಾಹುಲ್ ಅವರ 26 ರನ್, ರಿಷಭ್ ಪಂತ್ ಅವರ 37 ರನ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ 41 ರನ್ಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 150 ರನ್ಗಳಿಸಿ ಆಲೌಟ್ ಆಯಿತು.
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ತಂಡವು ಜಸ್ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ 67 ರನ್ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸ್ಟ್ರೇಲಿಯಾ ತಂಡವು ದ್ವಿತೀಯ ದಿನದಾಟದಲ್ಲಿ 104 ರನ್ಗಳಿಸಿ ಆಲೌಟ್ ಆಗಿದೆ. ಇನ
ಟೀಮ್ ಇಂಡಿಯಾ ಪರ 30 ರನ್ ನೀಡಿ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಪಡೆದರೆ, ಹರ್ಷಿತ್ ರಾಣಾ 3 ವಿಕೆಟ್ ಕಬಳಿಸಿದರು. ಇನ್ನು ಮೊಹಮ್ಮದ್ ಸಿರಾಜ್ 2 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.
ಪ್ರಥಮ ಇನಿಂಗ್ಸ್ನಲ್ಲಿನ 46 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಭರ್ಜರಿ ಆರಂಭ ಒದಗಿಸಿದ್ದಾರೆ. ಈ ಜೋಡಿಯು ಮೊದಲ ವಿಕೆಟ್ಗೆ 100+ ರನ್ಗಳ ಜೊತೆಯಾಟವಾಡಿದ್ದಾರೆ.
ಅತ್ತ ಯಶಸ್ವಿ ಜೈಸ್ವಾಲ್ 123 ಎಸೆತಗಳಲ್ಲಿ ಯಶಸ್ವಿ ಜೈಸ್ವಾಲ್ ಅರ್ಧಶತಕ ಪೂರೈಸಿದರೆ, ಕೆಎಲ್ ರಾಹುಲ್ 41 ರನ್ ಗಳಿಸಿದ್ದಾರೆ. ಈ ಮೂಲಕ 40 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 102 ರನ್ ಕಲೆಹಾಕಿದೆ.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.
ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್
ಭಾರತ ಪ್ಲೇಯಿಂಗ್ 11: ಜಸ್ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ.