
ಕ್ರೀಡಾಸ್ಫೂರ್ತಿ ಮತ್ತು ಪರಸ್ಪರ ಗೌರವಕ್ಕೆ ಸಾಕ್ಷಿಯಾಗುವಂತಹ ಘಟನೆಗೆ ಶುಕ್ರವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಏಕದಿನ ಪಂದ್ಯ ಸಾಕ್ಷಿಯಾಯಿತು. ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಟೀಂ ಇಂಡಿಯಾದ ಬ್ಯಾಟಿಂಗ್ ಪಡೆಯನ್ನು ಧೂಳೀಪಟ ಮಾಡಿದ ನ್ಯೂಜಿಲೆಂಡ್ ವೇಗದ ಬೌಲರ್ ಮ್ಯಾಟ್ ಹೆನ್ರಿಗೆ, ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಅದರ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ನಾಲ್ಕನೇ ಏಕದಿನ ಪಂದ್ಯದಲ್ಲಿ ಮ್ಯಾಟ್ ಹೆನ್ರಿ ತಮ್ಮ ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದರು. ಕೇವಲ 27 ರನ್ ನೀಡಿ 6 ವಿಕೆಟ್ ಕಬಳಿಸಿದ ಅವರು, ಭಾರತ ತಂಡದ ಪ್ರಮುಖ ಬ್ಯಾಟರ್‌ಗಳ ವಿಕೆಟ್ ಪಡೆದು ಕಿವೀಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ನ್ಯೂಜಿಲೆಂಡ್ ನೀಡಿದ್ದ 334 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಕೇವಲ 89 ರನ್‌ಗಳಿಗೆ ಆಲೌಟ್ ಆಯಿತು.
ಭಾರತದ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಹಂಗಾಮಿ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಹೆನ್ರಿ ಭಾರತೀಯ ಅಭಿಮಾನಿಗಳಿಗೆ ಆಘಾತ ನೀಡಿದರು. ಪಂದ್ಯ ಮುಗಿದ ಬಳಿಕ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಮತ್ತು ಮ್ಯಾಟ್ ಹೆನ್ರಿ ಪರಸ್ಪರ ಮಾತನಾಡುತ್ತಿರುವುದು ಕಂಡುಬಂದಿದೆ. ಇದೇ ವೇಳೆ 38 ವರ್ಷದ ಅನುಭವಿ ಬ್ಯಾಟರ್ ಕೊಹ್ಲಿ, ಹೆನ್ರಿಗೆ ಟೀಂ ಇಂಡಿಯಾದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ.
ಏಕದಿನ ಕ್ರಿಕೆಟ್‌ನಲ್ಲಿ ಮ್ಯಾಟ್ ಹೆನ್ರಿ ವಿರುದ್ಧ ವಿರಾಟ್ ಕೊಹ್ಲಿ ಈವರೆಗೆ 60 ಎಸೆತಗಳಲ್ಲಿ 59 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಹೆನ್ರಿ ಮೂರು ಬಾರಿ ಕೊಹ್ಲಿ ವಿಕೆಟ್ ಪಡೆದಿದ್ದು, ಅವರ ವಿರುದ್ಧ ಕೊಹ್ಲಿ 98.33 ಸ್ಟ್ರೈಕ್‌ರೇಟ್ ಹೊಂದಿದ್ದಾರೆ. ಇನ್ನು ಮ್ಯಾಟ್ ಹೆನ್ರಿ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ 12 ಇನ್ನಿಂಗ್ಸ್‌ಗಳಲ್ಲಿ ನಾಲ್ಕು ಬಾರಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಈ ಸಾಧನೆ ಮಾಡಿದ ಬೌಲರ್‌ಗಳ ಪೈಕಿ ಅವರು ಜಂಟಿ ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೆ, ನ್ಯೂಜಿಲೆಂಡ್ ಪರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಐದು ವಿಕೆಟ್ ಗೊಂಚಲು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಶೇನ್ ಬಾಂಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ರಿಚರ್ಡ್ ಹ್ಯಾಡ್ಲಿ (5) ಮತ್ತು ಟ್ರೆಂಟ್ ಬೌಲ್ಟ್ (6) ಈ ಪಟ್ಟಿಯಲ್ಲಿ ಅವರಿಗಿಂತ ಮುಂದಿದ್ದಾರೆ.
ರನ್ ಚೇಸ್ ಅಂದರೆ ವಿರಾಟ್ ಕೊಹ್ಲಿಯದ್ದೇ ಸಾಮ್ರಾಜ್ಯ; ಸಚಿನ್ ದಾಖಲೆ ಈಗ ಕಿಂಗ್ ಪಾಲು!
ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತದ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ಪ್ರದರ್ಶನ 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಮತ್ತೊಮ್ಮೆ ನೆನಪಿಸಿತು. ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತ ತಂಡ ಯಾವುದೇ ರನ್ ಗಳಿಸುವ ಮೊದಲೇ ಮೂರು ವಿಕೆಟ್ ಕಳೆದುಕೊಂಡಿತು. ಇಶಾನ್ ಕಿಶನ್ (27), ಅಕ್ಷರ್ ಪಟೇಲ್ (21) ಮತ್ತು ನಮನ್ ಧೀರ್ (21) ಮಾತ್ರ ಎರಡಂಕಿ ಮೊತ್ತ ಗಳಿಸಲು ಸಾಧ್ಯವಾಯಿತು. ಉಳಿದ ಬ್ಯಾಟರ್‌ಗಳು ಕಿವೀಸ್ ಬೌಲರ್‌ಗಳ ದಾಳಿಗೆ ತತ್ತರಿಸಿದರು. ಅಂತಿಮವಾಗಿ ಭಾರತ 26.4 ಓವರ್‌ಗಳಲ್ಲಿ ಕೇವಲ 89 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು.