IND vs ENG: ಇಂಗ್ಲೆಂಡ್ ವಿರುದ್ದದ ಟೆಸ್ಟ್ಗೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೆಸರಿಸಿದ ಮಾಜಿ ಕ್ರಿಕೆಟಿಗ
Mohammad Kaif: ಒಂದು ವರ್ಷದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಭಾರತದ ನಾಯಕತ್ವ ಈಗ ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಕೈಯಲ್ಲಿದೆ.
ಭಾರತ-ಇಂಗ್ಲೆಂಡ್ (India vs England) ನಡುವಣ ಏಕೈಕ ಟೆಸ್ಟ್ ಪಂದ್ಯವು ಜುಲೈ 1 ರಿಂದ ಶುರುವಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಲೀಸೆಸ್ಟರ್‌ಶೈರ್ ತಲುಪಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಈ ಟೆಸ್ಟ್ ಪಂದ್ಯವನ್ನು ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಏಕೆಂದರೆ ಈ ಪಂದ್ಯವು ಕಳೆದ ವರ್ಷದ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಟೆಸ್ಟ್ ಸರಣಿಯ ಭಾಗವಾಗಿದೆ. ಕಳೆದ ವರ್ಷ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಭಾರತ-ಇಂಗ್ಲೆಂಡ್ ನಡುವಣ ಕೊನೆಯ ಟೆಸ್ಟ್ ಪಂದ್ಯವನ್ನು ಮುಂದೂಡಲಾಗಿತ್ತು. ಅದರಂತೆ ಇದೀಗ ಇಂಗ್ಲೆಂಡ್ ವಿರುದ್ದದ ಸೀಮಿತ ಓವರ್ಗಳ ಸರಣಿಗೂ ಮುನ್ನ ಕಳೆದ ಬಾರಿಯ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಾಗುತ್ತಿದೆ. ಈ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಡ್ರಾ ಮಾಡಿಕೊಳ್ಳಲು ಇಂಗ್ಲೆಂಡ್ ಶತಪ್ರಯತ್ನ ನಡೆಸಲಿದೆ.
ಮತ್ತೊಂದೆಡೆ ಕಳೆದ ಒಂದು ವರ್ಷದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಭಾರತದ ನಾಯಕತ್ವ ಈಗ ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಕೈಯಲ್ಲಿದೆ. ಹಾಗೆಯೇ ಜೋ ರೂಟ್ ಬದಲಿಗೆ ಇಂಗ್ಲೆಂಡ್ ತಂಡವನ್ನು ಬೆನ್ ಸ್ಟೋಕ್ಸ್ ಮುನ್ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ನಾಯಕರೊಂದಿಗೆ ಉಭಯ ತಂಡಗಳು ಯಾವ ರೀತಿ ಪ್ರದರ್ಶನ ನೀಡುತ್ತವೆ ಎಂಬುದು ಕುತೂಹಲ ಮೂಡಿಸಿದೆ. ಅದರಲ್ಲೂ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.
ಈ ಕುತೂಹಲವನ್ನು ತಣಿಸುವಂತೆ ಇದೀಗ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡಿದ್ದಾರೆ. ಸಂವಾದವೊಂದರಲ್ಲಿ ಮಾತನಾಡಿದ ಕೈಫ್, ಭಾರತವು ನಾಲ್ಕು ವೇಗದ ಬೌಲರ್‌ಗಳು, ಒಬ್ಬ ಸ್ಪಿನ್ನರ್ ಮತ್ತು ಆರು ಬ್ಯಾಟ್ಸ್‌ಮನ್‌ಗಳೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಶುಭಮನ್ ಗಿಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದಿರುವ ಕೈಫ್, ಮತ್ತೊಂದೆಡೆ ರವೀಂದ್ರ ಜಡೇಜಾ ಸ್ಪಿನ್ನರ್ ಆಗಿ ಅವಕಾಶ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಅಶ್ವಿನ್‌ಗೆ ಕೋವಿಡ್ ಪಾಸಿಟಿವ್ ಆಗಿರುವ ಕಾರಣ ಈ ಪಂದ್ಯದಿಂದ ಹೊರಗುಳಿದರೆ ಅವರ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್ ಬೌಲಿಂಗ್ ಆಲ್ ರೌಂಡರ್ ಆಗಿ ತಂಡವನ್ನು ಸೇರಿಕೊಳ್ಳಬಹುದು. ಅದರಂತೆ ಮೊಹಮ್ಮದ್ ಕೈಫ್ ಪ್ರಕಾರ, ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ..
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಹನುಮ ವಿಹಾರಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ.
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.