
ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಮತ್ತು ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆಗಳ ಮಧ್ಯೆ, ಟೀಮ್ ಇಂಡಿಯಾದ ಮಾಜಿ ಸ್ಟಾರ್ ಕ್ರಿಕೆಟಿಗ ಯುವರಾಜ್ ಸಿಂಗ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರಾಜಕೀಯ ಹೇಳಿಕೆಗಳಿಗೆ ಆಸ್ಪದ ನೀಡದೆ, ಕೇವಲ ವಿದ್ಯಾರ್ಥಿಗಳ ಭವಿಷ್ಯ ಮತ್ತು ಸುರಕ್ಷತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡು ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ ಯುವರಾಜ್ ಸಿಂಗ್, ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಪ್ರತಿಪಾದಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ಹೀಗೆ ಬರೆದಿದ್ದಾರೆ…
“ಪ್ರತಿಯೊಬ್ಬ ಮಗು, ವಿದ್ಯಾರ್ಥಿ, ಮಹಿಳೆ ಮತ್ತು ಪುರುಷ—ನೀವೆಲ್ಲರೂ ಶಾಂತಿಯುತವಾಗಿ ಕಲಿಯುವ, ಸುರಕ್ಷಿತವಾಗಿ ಬೆಳೆಯುವ ಮತ್ತು ನಿಮ್ಮ ಕನಸುಗಳನ್ನು ಬೆನ್ನಟ್ಟುವ ಅವಕಾಶವನ್ನು ಹೊಂದಲು ಅರ್ಹರು. ನಿಮ್ಮ ಯೋಗಕ್ಷೇಮವೇ ಉಜ್ವಲ ಭಾರತದ ಅಡಿಪಾಯ. ಬನ್ನಿ, ನಾವೆಲ್ಲರೂ ಒಟ್ಟಾಗಿ ಕಾಳಜಿ, ಅವಕಾಶ ಮತ್ತು ಭರವಸೆಯ ಸಮುದಾಯಗಳನ್ನು ನಿರ್ಮಿಸೋಣ. ಭಾರತದ ಭವಿಷ್ಯದ ಹಿತದೃಷ್ಟಿಯಿಂದ, ಸೌಹಾರ್ದಯುತ ಮಾತುಕತೆಯ ಮೂಲಕ ನಾವೊಂದು ಉತ್ತಮ ಪರಿಹಾರವನ್ನು ಕಂಡುಕೊಳ್ಳಬಹುದು.”
ಈ ಮೂಲಕ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆಯುವುದನ್ನು ತಪ್ಪಿಸಿ, ಸರ್ಕಾರ ಮತ್ತು ವಿದ್ಯಾರ್ಥಿಗಳು ಸೌಹಾರ್ದಯುತ ಮಾತುಕತೆಯ ಮೂಲಕವೇ ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಯುವರಾಜ್ ಸಿಂಗ್ ಪ್ರತಿಪಾದಿಸಿದ್ದಾರೆ.
ನೀಟ್ (NEET-UG) ಎನ್ನುವುದು ಭಾರತದಲ್ಲಿ ವೈದ್ಯಕೀಯ (MBBS/BDS) ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಪರೀಕ್ಷೆ. ಈ ಪರೀಕ್ಷೆಯ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ, ಅಂಕಗಳ ಅಕ್ರಮ ಮತ್ತು ವ್ಯವಸ್ಥಿತ ಲೋಪದೋಷಗಳ ದೊಡ್ಡ ಹಗರಣ ನಡೆದಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು.
ಪರೀಕ್ಷೆಗೂ ಮುನ್ನವೇ ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿ, ವಾಟ್ಸಾಪ್ ಮತ್ತು ಟೆಲಿಗ್ರಾಮ್ ಗ್ರೂಪ್‌ಗಳಲ್ಲಿ ಹರಿದಾಡಿದ್ದವು. ಮಧ್ಯವರ್ತಿಗಳು ‘ಗೆಸ್ ಪೇಪರ್’ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗೆ ಇದನ್ನು ಮಾರಾಟ ಮಾಡಿದ್ದರು. ಈ ಬಗ್ಗೆ ಪ್ರಸ್ತುತ ಸಿಬಿಐ ತನಿಖೆ ನಡೆಸುತ್ತಿದ್ದು, ಹಲವರನ್ನು ಬಂಧಿಸಲಾಗಿದೆ.
ಪ್ರಸ್ತುತ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ, ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಸೇರಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯ ಮುಖ್ಯ ಉದ್ದೇಶ…
ಇದನ್ನೂ ಓದಿ: Commonwealth Games 2026: ಇಂದಿನಿಂದ ಪದಕ ಬೇಟೆ ಶುರು: ಇಲ್ಲಿದೆ ವೇಳಾಪಟ್ಟಿ
ದೆಹಲಿಯ ಜಂತರ್ ಮಂತರ್ ಮತ್ತು ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗವನ್ನು ಖಂಡಿಸಿ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ಇದೇ ವಿಚಾರವಾಗಿ ಇದೀಗ ಯುವರಾಜ್ ಸಿಂಗ್ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿ, ಸರ್ಕಾರ ಸೌಹಾರ್ದಯುತ ಮಾತುಕತೆಯ ಮೂಲಕ ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ.