2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಪಾಕಿಸ್ತಾನದಲ್ಲಿ ನಡೆಯುವುದು ಖಚಿತವಾಗಿದೆ. ಶುಕ್ರವಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಟೂರ್ನಿ ಆಯೋಜನೆಯ ಹಕ್ಕುಗಳಿಗೆ ಸಹಿ ಹಾಕಿದೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಆಯೋಜಿಸುವುದು ಪಾಕ್ ಕ್ರಿಕೆಟ್ ಮಂಡಳಿ ಖಚಿತಪಡಿಸಿಕೊಂಡಿದೆ.
ದುಬೈನಲ್ಲಿರುವ ಐಸಿಸಿ ಪ್ರಧಾನ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಪಿಸಿಬಿ ಅಧ್ಯಕ್ಷ ಝಾಕಾ ಅಶ್ರಫ್ ಮತ್ತು ಐಸಿಸಿ ಜನರಲ್ ಕೌನ್ಸೆಲ್ ಜೋನಾಥನ್ ಹಾಲ್ ಉಪಸ್ಥಿತರಿದ್ದರು. ಅಲ್ಲದೆ ಆಯೋಜನೆಯ ಹಕ್ಕುಗಳನ್ನು ಹಸ್ತಾಂತರಿಸಿರುವ ಐಸಿಸಿ ಟೂರ್ನಿಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಪ್ರಾರಂಭಿಸುವಂತೆ ಪಿಸಿಬಿಗೆ ತಿಳಿಸಿದೆ.
ಇತ್ತ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ನಡುವೆ ಆಯೋಜನೆಯ ಒಪ್ಪಂದವಾಗುತ್ತಿದ್ದಂತೆ ಭಾರತದ ನಡೆಯೇನು? ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೆ ಪಾಕ್ನಲ್ಲಿ ಟೂರ್ನಿ ನಡೆದರೆ ಭಾರತ ಹಿಂದೆ ಸರಿಯುವ ಸಾಧ್ಯತೆಯಿದೆ. ಇದಕ್ಕೆ ತಾಜಾ ಉದಾಹರಣೆ ಇತ್ತೀಚಿನ ಏಷ್ಯಾಕಪ್.
ಈ ಬಾರಿ ಏಷ್ಯಾಕಪ್ನ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೊಂದಿತ್ತು. ಆದರೆ ಪಾಕ್ನಲ್ಲಿ ಟೂರ್ನಿ ನಡೆದರೆ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಇದೇ ಕಾರಣದಿಂದಾಗಿ ಏಷ್ಯಾಕಪ್ನ್ನು ಹೈಬ್ರೀಡ್ ಮಾದರಿಯಲ್ಲಿ ಆಯೋಜಿಸಲಾಗಿತ್ತು.
ಅಂದರೆ ಪಾಕಿಸ್ತಾನದಲ್ಲಿ 4 ಪಂದ್ಯಗಳನ್ನು ಹಾಗೂ ಉಳಿದ ಮ್ಯಾಚ್ಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗಿತ್ತು. ಅದರಂತೆ ಟೀಮ್ ಇಂಡಿಯಾ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಇದೀಗ 8 ವರ್ಷಗಳ ಬಳಿಕ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತನ್ನದಾಗಿಸಿಕೊಂಡಿದೆ. ಹೀಗಾಗಿ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಭಾಗವಹಿಸಲಿದೆಯಾ ಎಂಬುದೇ ಪ್ರಶ್ನೆ.
ಏಕೆಂದರೆ ಐಸಿಸಿ ಟೂರ್ನಿಗಳನ್ನು ಸ್ಥಳಾಂತರಿಸಬೇಕಿದ್ದರೆ ನಿರ್ದಿಷ್ಠ ಕಾರಣಗಳಿರಬೇಕಾಗುತ್ತದೆ. ಇಲ್ಲಿ ಬಿಸಿಸಿಐ ಟೂರ್ನಿಯನ್ನು ಸ್ಥಳಾಂತರಿಸಲು ಸುರಕ್ಷತೆಯ ಕಾರಣಗಳನ್ನು ನೀಡಿದರೂ, ಅದಕ್ಕೆ ಇತರೆ ಕ್ರಿಕೆಟ್ ಮಂಡಳಿಗಳೂ ಕೂಡ ಕೈ ಜೋಡಿಸಬೇಕಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್, ಇಂಗ್ಲೆಂಡ್ ತಂಡಗಳು ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಿದೆ. ಹೀಗಾಗಿ 2025 ರಲ್ಲಿ ಬಿಸಿಸಿಐ ಯಾವ ಕಾರಣಗಳನ್ನು ಮುಂದಿಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ