
T20 World Cup 2026: ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿತ್ತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 89 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 52 ರನ್ ಚಚ್ಚಿದ್ದರು. ಇನ್ನು ಇಶಾನ್ ಕಿಶನ್ 54 ರನ್ಗಳ ಇನಿಂಗ್ಸ್ ಆಡಿದ್ದರು. ಈ ಮೂರು ಅರ್ಧಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು.
ಅದರಂತೆ 256 ರನ್ಗಳ ಗುರಿ ಪಡೆದ ನ್ಯೂಝಿಲೆಂಡ್ ತಂಡವು 72 ರನ್ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಮಾರಕ ದಾಳಿ ಮುಂದುವರೆಸಿದ ಜಸ್ಪ್ರೀತ್ ಬುಮ್ರಾ 4 ವಿಕೆಟ್ ಉರುಳಿಸಿದರು. ಈ ಮೂಲಕ ಟೀಮ್ ಇಂಡಿಯಾ ಬೌಲರ್ಗಳು ನ್ಯೂಝಿಲೆಂಡ್ ತಂಡವನ್ನು 19 ಓವರ್ಗಳಲ್ಲಿ 159 ರನ್ಗಳಿಗೆ ನಿಯಂತ್ರಿಸಿ ಆಲೌಟ್ ಮಾಡಿದರು. ಈ ಮೂಲಕ ಟೀಮ್ ಇಂಡಿಯಾ 96 ರನ್ಗಳ ಪ್ರಚಂಡ ಗೆಲುವು ದಾಖಲಿಸಿದೆ.
ಭಾರತ ತಂಡದ ಈ ಅಮೋಘ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಟೀಮ್ ಇಂಡಿಯಾದ ಪ್ರದರ್ಶನವನ್ನು ಹಾಡಿ ಹೊಗಳಿದಿದ್ದಾರೆ.
ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು! ಈ ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ. ಟೀಮ್ ಇಂಡಿಯಾ ಟೂರ್ನಿಯುದ್ದಕ್ಕೂ ಅತ್ಯುತ್ತಮ ಧೈರ್ಯವನ್ನು ತೋರಿಸಿದ್ದಾರೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನು ಸಂತಸ ಮತ್ತು ಹೆಮ್ಮೆ ಪಡುವಂತೆ ಮಾಡಿದೆ. ಅಭಿನಂದನೆಗಳು, ಟೀಮ್ ಇಂಡಿಯಾ! ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಟೀಮ್ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದು, ಟೂರ್ನಮೆಂಟ್ ಉದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಶ್ಲಾಘಿಸಿದ್ದಾರೆ. ಹಾಗೆಯೇ ಅದ್ಭುತ ಗೆಲುವಿನೊಂದಿಗೆ ತವರಿನಲ್ಲಿ ಟ್ರೋಫಿಯನ್ನು ಉಳಿಸಿಕೊಂಡು ಮತ್ತೊಮ್ಮೆ ಮರೆಯಲಾಗದ ಕ್ಷಣವನ್ನು ನೀಡಿದ ಟೀಮ್ ಇಂಡಿಯಾಗೆ ಅಭಿನಂದನೆಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.