Rohit Sharma: ಸತತ ಸೋಲುಗಳ ನಡುವೆ ದಾಖಲೆ ಬರೆದ ಹಿಟ್ಮ್ಯಾನ್
IPL 2022: ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಆಸ್ಟ್ರೇಲಿಯಾದ ಆರೋನ್ ಫಿಂಚ್, ಪಾಕಿಸ್ತಾನದ ಶೋಯೆಬ್ ಮಲಿಕ್ ಮತ್ತು ವೆಸ್ಟ್ ಇಂಡೀಸ್‌ನ ಕೀರನ್ ಪೊಲಾರ್ಡ್ ಕೂಡ ಈ ಸಾಧನೆ ಮಾಡಿದ್ದಾರೆ.
ಐಪಿಎಲ್ ಸೀಸನ್ 15 ನಲ್ಲಿ ಮುಂಬೈ ಇಂಡಿಯನ್ಸ್ ಸತತ ಐದು ಸೋಲನುಭವಿಸಿದೆ. ಅದರಲ್ಲೂ ಪಂಜಾಬ್ ಕಿಂಗ್ಸ್ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ 17 ಎಸೆತಗಳಲ್ಲಿ 28 ರನ್ ಬಾರಿಸಿದ್ದರು. ಇದರೊಂದಿಗೆ ವಿಶೇಷ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಿದೆ. ಹೌದು, ಹಿಟ್ಮ್ಯಾನ್ ಟಿ20 ಕ್ರಿಕೆಟ್ನಲ್ಲಿ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.
ರೋಹಿತ್ ಶರ್ಮಾ 362 ಇನ್ನಿಂಗ್ಸ್‌ಗಳಲ್ಲಿ 10 ಸಾವಿರ ರನ್‌ಗಳನ್ನು ಪೂರೈಸಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ 299 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಅಂದರೆ ಕೊಹ್ಲಿಗಿಂತ ಹಿಟ್ಮ್ಯಾನ್ 63 ಇನ್ನಿಂಗ್ಸ್ ಹೆಚ್ಚು ತೆಗೆದುಕೊಂಡಿದ್ದರು. ಪಂಜಾಬ್ ಕಿಂಗ್ಸ್ ವೇಗಿ ಕಗಿಸೊ ರಬಾಡ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ರೋಹಿತ್ 10 ಸಾವಿರ ರನ್ ಪೂರೈಸಿದರು. ಆದರೆ, ಮುಂದಿನ ಎಸೆತದಲ್ಲಿ ಔಟಾಗಿ ನಿರಾಸೆ ಮೂಡಿಸಿದರು. ಈ ಬಾರಿಯ ಐಪಿಎಲ್ನ 5 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಒಂದೇ ಒಂದು ಅರ್ಧಶತಕ ಗಳಿಸಲು ಸಾಧ್ಯವಾಗಿಲ್ಲ.
ಇನ್ನು ಟಿ20 ಕ್ರಿಕೆಟ್ನಲ್ಲಿ ಅತೀ ವೇಗವಾಗಿ 10 ಸಾವಿರ ರನ್ ಪೂರೈಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 285 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇನ್ನು ರೋಹಿತ್ ಶರ್ಮಾ ಟಿ20ಯಲ್ಲಿ 10,000 ರನ್ ಗಳಿಸಿದ ವಿಶ್ವದ 7ನೇ ಆಟಗಾರ. ಇದಕ್ಕೂ ಮೊದಲು ಕ್ರಿಸ್ ಗೇಲ್, ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಆಸ್ಟ್ರೇಲಿಯಾದ ಆರೋನ್ ಫಿಂಚ್, ಪಾಕಿಸ್ತಾನದ ಶೋಯೆಬ್ ಮಲಿಕ್ ಮತ್ತು ವೆಸ್ಟ್ ಇಂಡೀಸ್‌ನ ಕೀರನ್ ಪೊಲಾರ್ಡ್ ಕೂಡ ಈ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್
ಇದನ್ನೂ ಓದಿ: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಯಾರು ಗೊತ್ತಾ?
(Rohit Sharma Becomes Second Indian to Record 10,000 Runs in T20)