ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದನೇ ಟೆಸ್ಟ್ ಪಂದ್ಯವು ಫೆಬ್ರವರಿ 7 ರಿಂದ ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮುಂದಿದೆ. ಅಂದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಹಿಟ್ಮ್ಯಾನ್ ಬ್ಯಾಟ್ನಿಂದ ಒಂದು ಸಿಕ್ಸ್ ಮೂಡಿಬಂದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಈಗಾಗಲೇ ಟೀಮ್ ಇಂಡಿಯಾ ವಶಪಡಿಸಿಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಉಳಿದ ಮೂರು ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಭಾರತ ತಂಡ ಜಯ ಸಾಧಿಸಿತ್ತು. ಅದರಂತೆ 3-1 ಅಂತರದಿಂದ ಟೀಮ್ ಇಂಡಿಯಾ ಸರಣಿ ಗೆದ್ದುಕೊಂಡಿದೆ. ಇದೀಗ ಐದನೇ ಟೆಸ್ಟ್ ಪಂದ್ಯವು ಭಾರತ ತಂಡದ ಪಾಲಿಗೆ ಔಪಚಾರಿಕ.
ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ
ಅತ್ತ ಇಂಗ್ಲೆಂಡ್ ತಂಡವು ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಹೀಗಾಗಿ ಧರ್ಮಶಾಲಾದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.