
ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಟೀಮ್ ಇಂಡಿಯಾದ ಆಯ್ಕೆ ವಿಷಯದಲ್ಲಿ ಮತ್ತೊಮ್ಮೆ ಕಡೆಗಣಿಸಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಯ್ಕೆ ಮಾಡಲಾದ ತಂಡಗಳಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಿದರೂ ಸ್ಯಾಮ್ಸನ್ ಅವರನ್ನು ಪರಿಗಣಿಸಿಲ್ಲ.
ಈ ಸರಣಿಯ ಮೊದಲೆರಡು ಪಂದ್ಯಗಳಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಸೇರಿದಂತೆ ಕೆಲ ಆಟಗಾರರು ಹೊರಗುಳಿದಿದ್ದಾರೆ. ಇವರ ಬದಲಿಗೆ ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ ಸೇರಿದಂತೆ ಕೆಲ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಸ್ಯಾಮ್ಸನ್ ಅವರನ್ನು ಆಯ್ಕೆಗೆ ಪರಿಗಣಿಸದಿರುವುದು ಅಚ್ಚರಿ.
ಒಂದೆಡೆ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಸಂಜು ಸ್ಯಾಮ್ಸನ್ ಅವರನ್ನು ಏಷ್ಯನ್ ಗೇಮ್ಸ್ಗೂ ಆಯ್ಕೆ ಮಾಡಿಲ್ಲ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದಲೂ ಕೈ ಬಿಡಲಾಗಿದೆ. ಅಂದರೆ ಏಷ್ಯಾಕಪ್ನಲ್ಲಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಸ್ಯಾಮ್ಸನ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಿಲ್ಲ ಎಂಬುದೇ ಅಚ್ಚರಿ.
ಏಕೆಂದರೆ ಸಂಜು ಸ್ಯಾಮ್ಸನ್ ಏಕದಿನ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು. ಇದುವರೆಗೆ 13 ಏಕದಿನ ಪಂದ್ಯಗಳನ್ನಾಡಿರುವ ಕೇರಳದ ಕ್ರಿಕೆಟಿಗ 55.71 ಸರಾಸರಿಯಲ್ಲಿ ಒಟ್ಟು 375 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ. ಇದಾಗ್ಯೂ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗದಿರುವುದು ವಿಪರ್ಯಾಸ.
ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟವಾಗುತ್ತಿದ್ದಂತೆ ಅತ್ತ ಸಂಜು ಸ್ಯಾಮ್ಸನ್ ಸೋಷಿಯಲ್ ಮೀಡಿಯಾದಲ್ಲಿ ನಗುವಿನ ಇಮೋಜಿ ಹಾಕಿದ್ದಾರೆ. ಮೇಲ್ನೋಟಕ್ಕೆ ಎಲ್ಲದಕ್ಕೂ ನಗುವೇ ಉತ್ತರ ಎಂಬಂತಿರುವ ಸ್ಯಾಮ್ಸನ್ ಅವರ ಈ ಪೋಸ್ಟ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾದ ಟೀಮ್ ಇಂಡಿಯಾ ಈ ಕೆಳಗಿನಂತಿದೆ:
ಮೊದಲ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.
ಇದನ್ನೂ ಓದಿ: IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?
ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಅಕ್ಷರ್ ಪಟೇಲ್ (ಫಿಟ್ನೆಸ್ ಸಾಧಿಸಿದರೆ).