
ಟೀಮ್ ಇಂಡಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶ್ರೀಲಂಕಾ ತಂಡ 290 ರನ್‌ಗಳಿಗೆ ಆಲೌಟ್ ಆಗಿದೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್‌ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಮೊದಲ ಇನಿಂಗ್ಸ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 503 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡಕ್ಕೆ ಭಾರತೀಯ ಬೌಲರ್‌ಗಳು ಆರಂಭಿಕ ಆಘಾತ ನೀಡಿದರು. ಇದರ ಪರಿಣಾಮವಾಗಿ ಲಂಕಾ ಪಡೆ ಕೇವಲ 35 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಕಣಕ್ಕಿಳಿದ ಪಸಿಂದು ಸೂರ್ಯಬಂದರ 80 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.
ಇನ್ನು 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೋನಾಲ್ ದಿನುಷಾ 162 ಎಸೆತಗಳಲ್ಲಿ 103 ರನ್‌ಗಳ ಭರ್ಜರಿ ಇನಿಂಗ್ಸ್ ಆಡಿದರು. ಈ ಶತಕದ ನೆರವಿನಿಂದ ಶ್ರೀಲಂಕಾ ತಂಡದ ಸ್ಕೋರ್ 250ರ ಗಡಿ ದಾಟಿತು. ಈ ಹಂತದಲ್ಲಿ ಬಿಗಿ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್‌ಗಳು ಸತತ ವಿಕೆಟ್ ಪಡೆದರು. ಇದರ ಪರಿಣಾಮವಾಗಿ ಶ್ರೀಲಂಕಾ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ 290 ರನ್‌ಗಳಿಗೆ ಆಲೌಟ್ ಆಯಿತು.
ಟೀಮ್ ಇಂಡಿಯಾ ಪರ ಪ್ರಸಿದ್ಧ್ ಕೃಷ್ಣ ಹಾಗೂ ಮಾನವ್ ಸುತಾರ್ ತಲಾ 3 ವಿಕೆಟ್ ಪಡೆದರೆ, ಸರಾಂಶ್ ಜೈನ್ 2 ವಿಕೆಟ್ ಕಬಳಿಸಿ ಮಿಂಚಿದರು.
ಮೊದಲ ಇನಿಂಗ್ಸ್‌ನಲ್ಲಿ 213 ರನ್‌ಗಳ ಭರ್ಜರಿ ಮುನ್ನಡೆ ಪಡೆದ ಟೀಮ್ ಇಂಡಿಯಾ, ಇದೀಗ ಶ್ರೀಲಂಕಾ ತಂಡಕ್ಕೆ ಫಾಲೋಆನ್ ಹೇರಿದೆ. ಅದರಂತೆ ಲಂಕಾ ಪಡೆ ತನ್ನ ದ್ವಿತೀಯ ಇನಿಂಗ್ಸ್ ಆರಂಭಿಸಿದೆ. ಒಂದು ವೇಳೆ ಶ್ರೀಲಂಕಾ ತಂಡವನ್ನು ಎರಡನೇ ಇನಿಂಗ್ಸ್‌ನಲ್ಲಿ 213 ರನ್‌ಗಳ ಒಳಗಾಗಿ ಆಲೌಟ್ ಮಾಡಿದರೆ, ಭಾರತ ತಂಡ ಇನಿಂಗ್ಸ್ ಜಯ ಸಾಧಿಸಲಿದೆ.
ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ನಲ್ಲಿ ‘ಫಾಲೋಆನ್’ ಎಂದರೇನು? ಇದರ ನಿಯಮಗಳೇನು?
ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಸರಾನ್ಶ್ ಜೈನ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಶ್ರೀಲಂಕಾ (ಪ್ಲೇಯಿಂಗ್ XI): ಲಹಿರು ಉದಾರ, ಕಮಿಲ್ ಮಿಶ್ರಾ, ಪಸಿಂದು ಸೂರಿಯಬಂಡಾರ, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ(ನಾಯಕ), ಸೋನಾಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ(ವಿಕೆಟ್ ಕೀಪರ್), ಕೇಶರ ನುವಾಂತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೊ.