
ಸುಮಾರು ಐದು ತಿಂಗಳ ವಿಶ್ರಾಂತಿ ಮತ್ತು ಭಾರತ ಟಿ20 ತಂಡದಿಂದ ಹೊರಗುಳಿದ ನಿರಾಸೆಯ ನಂತರ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ ಮುಂಬೈ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಮೈದಾನದಲ್ಲಿ ಅಕ್ಷರಶಃ ಅಬ್ಬರಿಸಿದ್ದಾರೆ. ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ (SMAT) 2026-27ರ ಆರಂಭಿಕ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಆಯ್ಕೆಗಾರರಿಗೆ ತಮ್ಮ ಬ್ಯಾಟ್ ಮೂಲಕವೇ ಖಡಕ್ ಉತ್ತರ ನೀಡಿದ್ದಾರೆ.
ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್, ನಿಗದಿತ 20 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. 173 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಮುಂಬೈ ತಂಡದ ಪರ ನಾಯಕ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಮುಂಬೈ 90 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದಾಗ 4ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಇಳಿದ ಸೂರ್ಯಕುಮಾರ್ ಯಾದವ್, ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಹೈದರಾಬಾದ್ ಸ್ಪಿನ್ನರ್‌ಗಳನ್ನು ಮನಬಂದಂತೆ ದಂಡಿಸಿದ ಅವರು, ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಂತಿಮವಾಗಿ 21 ಎಸೆತಗಳನ್ನು ಎದುರಿಸಿದ ಸೂರ್ಯ, 6 ಫೋರ್ ಹಾಗೂ 5 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 285.71ರ ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 60 ರನ್ ಸಿಡಿಸಿದರು.
ಇದನ್ನೂ ಓದಿ: ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ
ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ಗೆ ಉತ್ತಮ ಸಾಥ್ ನೀಡಿದ ಯುವ ಆಟಗಾರ ಮುಶೀರ್ ಖಾನ್ 24 ಎಸೆತಗಳಲ್ಲಿ 51 ರನ್ (6 ಫೋರ್, 3 ಸಿಕ್ಸರ್) ಬಾರಿಸಿದರು. ಈ ಜೋಡಿ 3ನೇ ವಿಕೆಟ್‌ಗೆ ಕೇವಲ 23 ಎಸೆತಗಳಲ್ಲಿ 65 ರನ್‌ಗಳ ಜೊತೆಯಾಟವಾಡಿ ಪಂದ್ಯದ ದಿಕ್ಕನ್ನೇ ಬದಲಿಸಿತು. ಪರಿಣಾಮವಾಗಿ ಮುಂಬೈ ತಂಡ ಕೇವಲ 13.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿ, ಇನ್ನೂ 41 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ಈ ಪಂದ್ಯದಲ್ಲಿ ಗರಿಷ್ಠ ಸ್ಕೋರರ್ ಆಗಿ ಹೊರಹೊಮ್ಮಿದ ಮುಂಬೈ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ‘ಪಂದ್ಯಶ್ರೇಷ್ಠ’ ಪ್ರಶಸ್ತಿ ಒಲಿದುಬಂತು. ಮುಂಬರುವ ಸರಣಿಗಳಿಗೆ ಮುನ್ನ ಸೂರ್ಯ ಅವರ ಈ ಫಾರ್ಮ್ ಮುಂಬೈ ತಂಡದ ಜೊತೆಗೆ ಮುಂಬೈ ಇಂಡಿಯನ್ಸ್ ಅಭಿಮಾನಿಗಳಲ್ಲೂ ಹೊಸ ನಿರೀಕ್ಷೆ ಮೂಡಿಸಿದೆ.
Published On - 2:06 pm, Sat, 14 November 26