ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಸೂಪರ್ 8 ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ (T20 World Cup 2024) ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸೂರ್ಯಕುಮಾರ್ ಯಾದವ್ (Suryakumar Yadav) ಸಿಡಿಸಿದ ಅಮೋಘ ಅರ್ಧಶತಕದ ಆಧಾರದ ಮೇಲೆ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು. ಈ ಮೂಲಕ ಅಫ್ಘಾನಿಸ್ತಾನ ತಂಡಕ್ಕೆ 182 ರನ್‌ಗಳ ಗೆಲುವಿನ ಗುರಿ ನೀಡಿತು. ಗುರಿ ಬೆನ್ನಟ್ಟಿದ ಅಫ್ಘಾನ್ ತಂಡ ಬುಮ್ರಾ (Jasprit Bumrah) ದಾಳಿಗೆ ನಲುಗಿ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡಿದಲ್ಲದೆ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿತು.
ಟಾಸ್ ಗೆದ್ದು ಮೊದಲು ಬ್ಯಾಡಿಂಗ್ ಮಾಡಿದ ಟೀಂ ಇಂಡಿಯಾ ಸೂರ್ಯಕುಮಾರ್ ಯಾದವ್ ಅವರ ಅದ್ಭುತ ಅರ್ಧಶತಕ ಮತ್ತು ಹಾರ್ದಿಕ್ ಪಾಂಡ್ಯ ಅವರ ಜೊತೆಯಾಟದ ಆಧಾರದ ಮೇಲೆ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ಎಂದಿನಂತೆ ಈ ಪಂದ್ಯದಲ್ಲೂ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಕೇವಲ 8 ರನ್ಗಳಿಗೆ ವಿಕೆಟ್ ಒಪ್ಪಿಸಿದರು. ಆ ನಂತರ ಬಂದ ಪಂತ್ ಕೂಡ 20 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು. ಕಳೆದ ಮೂರು ಪಂದ್ಯಗಳಲ್ಲಿ ಒಂದಂಕಿಗೆ ಸುಸ್ತಾಗಿದ್ದ ಕೊಹ್ಲಿ, ಈ ಪಂದ್ಯದಲ್ಲಿ 24 ರನ್ ಬಾರಿಸಿದರಾದರೂ ಅದಕ್ಕಾಗಿ 24 ಎಸೆತಗಳನ್ನು ತೆಗೆದುಕೊಂಡರು.
ಆ ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಸೂರ್ಯಕುಮಾರ್ 28 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 53 ರನ್ ಗಳಿಸಿ ಔಟಾದರು. ಇವರನ್ನು ಹೊರತುಪಡಿಸಿ, ಭಾರತದ ಉಪನಾಯಕ ಹಾರ್ದಿಕ್ 24 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 32 ರನ್ ಗಳಿಸಿದರು. ಅಲ್ಲದೆ ಐದನೇ ವಿಕೆಟ್‌ಗೆ ಈ ಇಬ್ಬರು 60 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಕೊನೆಯಲ್ಲಿ ಅಕ್ಷರ್ ಪಟೇಲ್ ಉತ್ತಮ ಹೊಡೆತಗಳನ್ನು ಬಾರಿಸಿ ತಂಡವನ್ನು 180 ರನ್ ಗಡಿ ದಾಟುವಂತೆ ಮಾಡಿದರು. ಅಫ್ಘಾನಿಸ್ತಾನ ಪರ ಫಜಲ್ಹಕ್ ಫಾರೂಕಿ ಮತ್ತು ನಾಯಕ ರಶೀದ್ ಖಾನ್ ತಲಾ ಮೂರು ವಿಕೆಟ್ ಪಡೆದರು.
A 47-run victory in Barbados 🥳🏖️#TeamIndia kick off their Super 8 stage with a brilliant win against Afghanistan 👏👏
📸 ICC
Scorecard ▶️ https://t.co/xtWkPFaJhD#T20WorldCup | #AFGvIND pic.twitter.com/qG8F3XJWeZ
— BCCI (@BCCI) June 20, 2024
ಭಾರತ ನೀಡಿದ 183 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಪರ ಅಜ್ಮತುಲ್ಲಾ ಒಮರ್ಜಾಯ್ 20 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ ಗರಿಷ್ಠ 26 ರನ್ ಗಳಿಸಿದರು. ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನಕ್ಕೆ ಉತ್ತಮ ಆರಂಭ ಸಿಗದ ಕಾರಣ ತಂಡ ನಿಗದಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳುತ್ತಲೇ ಇತ್ತು. ಈ ಪಂದ್ಯದಲ್ಲೂ ಭಾರತದ ಬೌಲರ್‌ಗಳು ದಿಟ್ಟ ಪ್ರದರ್ಶನ ನೀಡಿ ಸ್ಕೋರ್ ಅನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಭಾರತ ಈಗ ಶನಿವಾರ ಬಾಂಗ್ಲಾದೇಶವನ್ನು ಎದುರಿಸಲಿದೆ. ಸೂಪರ್ 8 ಹಂತದ ಗ್ರೂಪ್ 1 ರಲ್ಲಿ ಭಾರತ ಎರಡು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:37 pm, Thu, 20 June 24