Abhishek Sharma: ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು
T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಟೀಮ್ ಇಂಡಿಯಾದ ಯುವ ದಾಂಡಿಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಡೌಟ್.

ಭಾರತ ತಂಡದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವ ಆಟಗಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ನಾಳೆ (ಫೆ.12) ನಡೆಯಲಿರುವ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎನ್ನಬಹುದು.
ಯುಎಸ್ಎ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ದ್ವಿತೀಯ ಪಂದ್ಯಕ್ಕಾಗಿ ಭಾನುವಾರ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಭೋಜನಾ ಕೂಟ ಏರ್ಪಡಿಸಿದ್ದರು. ಈ ಡಿನ್ನರ್ ಪಾರ್ಟಿಯ ವೇಳೆ ಅಭಿಷೇಕ್ ಶರ್ಮಾ ಅವರ ಆರೋಗ್ಯ ಹದಗೆಟ್ಟಿದ್ದು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ ಮಾಹಿತಿ ಪ್ರಕಾರ, ಅಭಿಷೇಕ್ ಶರ್ಮಾ ಅವರು ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದು, ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ. ಮಂಗಳವಾರದವರೆಗೆ ಅವರು ಆಸ್ಪತ್ರೆಯಲ್ಲೇ ಉಳಿದುಕೊಂಡಿರುವ ಕಾರಣ ಗುರುವಾರ ನಡೆಯಲಿರುವ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದು ಅನುಮಾನ.
ಆರಂಭಿಕರು ಯಾರು?
ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದರೆ ಅವರ ಬದಲಿಗೆ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಓಪನರ್ಗಳಾಗಿ ಇನಿಂಗ್ಸ್ ಆರಂಭಿಸುತ್ತಿದ್ದರು. ಆದರೆ ನ್ಯೂಝಿಲೆಂಡ್ ವಿರುದ್ಧ ತೋರಿದ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಸ್ಯಾಮ್ಸನ್ ಅವರನ್ನು ಕೈ ಬಿಟ್ಟು ಇಶಾನ್ ಕಿಶನ್ ಅವರಿಗೆ ಆರಂಭಿಕನ ಸ್ಥಾನ ನೀಡಲಾಗಿದೆ.
ಇದೀಗ ಅಭಿಷೇಕ್ ಶರ್ಮಾ ಅಲಭ್ಯರಾದರೆ ಟೀಮ್ ಇಂಡಿಯಾ ಮುಂದಿರುವುದು ಏಕೈಕ ಆಯ್ಕೆ. ಅದರಂತೆ ನಮೀಬಿಯ ವಿರುದ್ಧ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ಇನ್ನು ನಮೀಬಿಯ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ಪಾಕಿಸ್ತಾನ್ ಹಾಗೂ ನೆದರ್ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಅದಕ್ಕೂ ಮುನ್ನ ಸಂಪೂರ್ಣ ಫಿಟ್ನೆಸ್ನೊಂದಿಗೆ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ: ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್
ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
