ಬರೋಬ್ಬರಿ 397 ರನ್ಗಳು: ನಾಕೌಟ್ನಲ್ಲಿ ಹೊಸ ಇತಿಹಾಸ ಬರೆದ ಟೀಮ್ ಇಂಡಿಯಾ
Team India: ಮೊದಲ ವಿಕೆಟ್ಗೆ 71 ರನ್ಗಳ ಜೊತೆಯಾಟವಾಡಿದ ಬಳಿಕ ರೋಹಿತ್ ಶರ್ಮಾ (47) ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅಲ್ಲದೆ ಏಕದಿನ ಕ್ರಿಕೆಟ್ನಲ್ಲಿ 50ನೇ ಶತಕ ಸಿಡಿಸಿ ಕಿಂಗ್ ಕೊಹ್ಲಿ (117) ಹೊಸ ಇತಿಹಾಸ ನಿರ್ಮಿಸಿದರು.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ನ ಮೊದಲ ಸೆಮಿಫೈನಲ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಸ್ಪೋಟಕ ಆರಂಭ ಒದಗಿಸಿದ್ದರು.
ಮೊದಲ ವಿಕೆಟ್ಗೆ 71 ರನ್ಗಳ ಜೊತೆಯಾಟವಾಡಿದ ಬಳಿಕ ರೋಹಿತ್ ಶರ್ಮಾ (47) ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅಲ್ಲದೆ ಏಕದಿನ ಕ್ರಿಕೆಟ್ನಲ್ಲಿ 50ನೇ ಶತಕ ಸಿಡಿಸಿ ಕಿಂಗ್ ಕೊಹ್ಲಿ (117) ಹೊಸ ಇತಿಹಾಸ ನಿರ್ಮಿಸಿದರು. ಹಾಗೆಯೇ ಶುಭ್ಮನ್ ಗಿಲ್ 80 ರನ್ಗಳ ಕೊಡುಗೆ ನೀಡಿದರು.
ಇನ್ನು 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ 70 ಎಸೆತಗಳಲ್ಲಿ 105 ರನ್ ಬಾರಿಸಿ ತಂಡದ ಮೊತ್ತವನ್ನು 300ರ ಗಡಿದಾಟಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ಕೆಎಲ್ ರಾಹುಲ್ 39 ರನ್ಗಳ ಕಾಣಿಕೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 397 ರನ್ ಕಲೆಹಾಕಿತು.
- ವಿಶೇಷ ಎಂದರೆ ಇದು ಏಕದಿನ ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ತಂಡವೊಂದು ಕಲೆಹಾಕಿದ ಗರಿಷ್ಠ ಸ್ಕೋರ್. ಇದಕ್ಕೂ ಮುನ್ನ 2015ರ ಸೆಮಿಫೈನಲ್ನಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 328 ರನ್ ಬಾರಿಸಿ ದಾಖಲೆ ಬರೆದಿತ್ತು. ಇದೀಗ ಈ ದಾಖಲೆಯನ್ನು ಭಾರತ ತಂಡ ಅಳಿಸಿ ಹಾಕಿದೆ.
- ಅಷ್ಟೇ ಅಲ್ಲದೆ ಏಕದಿನ ವಿಶ್ವಕಪ್ನ ನಾಕೌಟ್ (ಕ್ವಾಟರ್ ಫೈನಲ್/ ಸೆಮಿಫೈನಲ್/ಫೈನಲ್) ಪಂದ್ಯದಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಕೂಡ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ 2015 ರ ಏಕದಿನ ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನ್ಯೂಝಿಲೆಂಡ್ 393 ರನ್ಗಳಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ನ್ಯೂಝಿಲೆಂಡ್ ವಿರುದ್ಧ 397 ರನ್ ಬಾರಿಸಿ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.
- ಹಾಗೆಯೇ ಏಕದಿನ ವಿಶ್ವಕಪ್ನ ನಾಕೌಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಲೆಹಾಕಿದ ಗರಿಷ್ಠ ಸ್ಕೋರ್ ಕೂಡ ಇದಾಗಿದೆ. ಭಾರತ ತಂಡವು 2015 ರ ಕ್ವಾರ್ಟರ್ ಫೈನಲ್ನಲ್ಲಿ ಬಾಂಗ್ಲಾದೇಶ್ ವಿರುದ್ಧ 302 ರನ್ ಕಲೆಹಾಕಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ 397 ರನ್ಗಳೊಂದಿಗೆ ಟೀಮ್ ಇಂಡಿಯಾ ಹೊಸ ದಾಖಲೆ ನಿರ್ಮಿಸಿದೆ.
- ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು 397 ರನ್ ಬಾರಿಸಲು ಒಟ್ಟು 19 ಸಿಕ್ಸರ್ಗಳನ್ನು ಸಿಡಿಸಿದ್ದರು. ಇದು ಕೂಡ ಹೊಸ ವಿಶ್ವ ದಾಖಲೆ ಎಂಬುದು ವಿಶೇಷ. ಅಂದರೆ ಏಕದಿನ ವಿಶ್ವಕಪ್ ನಾಕೌಟ್ ಪಂದ್ಯಗಳಲ್ಲಿ ಯಾವುದೇ ತಂಡ 19 ಸಿಕ್ಸ್ಗಳನ್ನು ಸಿಡಿಸಿರಲಿಲ್ಲ.
- 2015 ರ ವಿಶ್ವಕಪ್ ಕ್ವಾರ್ಟರ್ ಫೈನಲ್ನಲ್ಲಿ ನ್ಯೂಝಿಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ದಾಂಡಿಗರು 16 ಸಿಕ್ಸ್ಗಳನ್ನು ಬಾರಿಸಿದ್ದರು. ಇದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ವಿಶ್ವಕಪ್ ಸೆಮಿಫೈನಲ್ನಲ್ಲಿ 19 ಸಿಕ್ಸ್ಗಳನ್ನು ಸಿಡಿಸುವ ಮೂಲಕ ಟೀಮ್ ಇಂಡಿಯಾ ಬ್ಯಾಟರ್ಗಳು ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಒಟ್ಟಿನಲ್ಲಿ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾ ಬ್ಯಾಟರ್ಗಳು ಹೊಸ ಇತಿಹಾಸ ನಿರ್ಮಿಸಿದ್ದಾರೆ.