IND vs AUS: ಇಬ್ಬರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯಲು ಟೀಮ್ ಇಂಡಿಯಾ ಪ್ಲ್ಯಾನ್

|

Updated on: Dec 25, 2024 | 2:00 PM

India vs Australia: ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಜ್ಜಾಗಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಗುರುವಾರದಿಂದ (ಡಿ.26) ಶುರುವಾಗಲಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ. ಏಕೆಂದರೆ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯ ಕಂಡಿದೆ.

IND vs AUS: ಇಬ್ಬರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯಲು ಟೀಮ್ ಇಂಡಿಯಾ ಪ್ಲ್ಯಾನ್
Team India
Follow us on

ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಬ್ಬರು ಸ್ಪಿನ್ನರ್​​ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೆಲ್ಬೋರ್ನ್​ನ ಎಂಸಿಜಿ ಮೈದಾನದ ಪಿಚ್ ಸ್ಪಿನ್ನರ್​ಗಳಿಗೆ ನೆರವಾಗುವ ನಿರೀಕ್ಷೆಯಿದ್ದು, ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲು ಚಿಂತಿಸಲಾಗಿದೆ.

ಅದರಂತೆ ನಾಲ್ಕನೇ ಟೆಸ್ಟ್ ಪಂದ್ಯದಿಂದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಕೈ ಬಿಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಅವರ ಬದಲಿಗೆ ಸ್ಪಿನ್ ಆಲ್​ರೌಂಡರ್ ಆಗಿ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ನೀಡಲಿದ್ದಾರೆ.

ಪರ್ತ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಕಣಕ್ಕಿಳಿದಿದ್ದರು. ಆದರೆ ಅಡಿಲೇಡ್​ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಅವರ ಬದಲಿಗೆ ರವಿಚಂದ್ರನ್ ಅಶ್ವಿನ್ ಅವರಿಗೆ ಅವಕಾಶ ನೀಡಲಾಗಿತ್ತು.

ಇನ್ನು ಬ್ರಿಸ್ಬೇನ್​ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಸ್ಪಿನ್ ಆಲ್​ರೌಂಡರ್ ಆಗಿ ರವೀಂದ್ರ ಜಡೇಜಾ ಕಾಣಿಸಿಕೊಂಡಿದ್ದರು. ಇದೀಗ ಮೆಲ್ಬೋರ್ನ್​​ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಜೊತೆ ವಾಷಿಂಗ್ಟನ್ ಸುಂದರ್ ಅವರನ್ನು ಸಹ ಕಣಕ್ಕಿಳಿಸಲು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪ್ಲ್ಯಾನ್ ರೂಪಿಸಿದ್ದಾರೆ.

ಅದರಂತೆ ಎಂಸಿಜಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಆಲ್​ರೌಂಡರ್​ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಮುಂದುವರೆಯಲಿದ್ದಾರೆ.

ಮತ್ತೊಂದೆಡೆ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದೆ. ಈ ಇಲೆವೆನ್​ನಲ್ಲಿ ಸ್ಪಿನ್ನರ್ ಆಗಿ ನಾಥನ್ ಲಿಯಾನ್ ಅವರನ್ನು ಆಯ್ಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಕೂಡ ಇಬ್ಬರು ಸ್ಪಿನ್ನರ್​​ಗಳನ್ನು ಆಡಿಸಲು ಮುಂದಾಗಿರುವುದು ವಿಶೇಷ.

ಹೀಗಾಗಿ ಮೆಲ್ಬೋರ್ನ್​ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಈ ಬದಲಾವಣೆಯ ಹೊರತಾಗಿ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಸುದ್ದಿ ಕೂಡ ಇದೆ.

ಇದನ್ನೂ ಓದಿ: 22ನೇ ವಯಸ್ಸಿನಲ್ಲೇ ಸೈಮ್ ಅಯ್ಯೂಬ್ ಅಬ್ಬರ: ಸಚಿನ್, ವಿರಾಟ್ ಕೊಹ್ಲಿ ದಾಖಲೆ ಶೇಕಿಂಗ್

ಒಂದು ವೇಳೆ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದರೆ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಬೇಕಾಗುತ್ತದೆ. ಹೀಗಾಗಿ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ತರ ಬದಲಾವಣೆ ಕಂಡು ಬರುವ ಸಾಧ್ಯತೆ ಹೆಚ್ಚಿದೆ.