4 ಪಂದ್ಯ, 303 ರನ್, 16 ಸಿಕ್ಸರ್; ಅಂಡರ್-19 ಏಷ್ಯಾಕಪ್‌ನಲ್ಲಿ ಸೆಹ್ವಾಗ್ ಪುತ್ರನ ಆರ್ಭಟ

ಅಂಡರ್-19 ಏಷ್ಯಾಕಪ್‌ನಲ್ಲಿ ಆರ್ಯವೀರ್ ಸೆಹ್ವಾಗ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಯುಎಇ ವಿರುದ್ಧ ಶತಕದ ನಂತರ, ಅಫ್ಘಾನಿಸ್ತಾನ ವಿರುದ್ಧದ ಸೆಮಿಫೈನಲ್‌ನಲ್ಲಿ 51 ರನ್‌ಗಳ ಅರ್ಧಶತಕ ಸಿಡಿಸಿ ಭಾರತಕ್ಕೆ ಆಸರೆಯಾದರು. ಟೂರ್ನಿಯಲ್ಲಿ 303 ರನ್ ಗಳಿಸಿ ಅಗ್ರ ಸ್ಕೋರರ್ ಆಗಿರುವ ಆರ್ಯವೀರ್, ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಬೌಂಡರಿ, ಸಿಕ್ಸರ್‌ಗಳ ಮೂಲಕ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

4 ಪಂದ್ಯ, 303 ರನ್, 16 ಸಿಕ್ಸರ್; ಅಂಡರ್-19 ಏಷ್ಯಾಕಪ್‌ನಲ್ಲಿ ಸೆಹ್ವಾಗ್ ಪುತ್ರನ ಆರ್ಭಟ
Aaryavir Sehwag

Updated on: Nov 12, 2026 | 4:07 PM

ಅಂಡರ್-19 ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾದ ಯುವ ಆಟಗಾರ ಆರ್ಯವೀರ್ ಸೆಹ್ವಾಗ್ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಯುಎಇ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಆರ್ಯವೀರ್, ಇದೀಗ ಅಫ್ಘಾನಿಸ್ತಾನ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲೂ ಅರ್ಧಶತಕ ಬಾರಿಸಿದ್ದಾರೆ. ಆರ್ಯವೀರ್ 57 ಎಸೆತಗಳಲ್ಲಿ 51 ರನ್ ಬಾರಿಸಿ ತಮ್ಮ ಇನ್ನಿಂಗ್ಸ್‌ನಲ್ಲಿ ನಾಲ್ಕು ಸಿಕ್ಸರ್ ಹಾಗೂ ನಾಲ್ಕು ಬೌಂಡರಿಗಳನ್ನು ಸಿಡಿಸಿದರು. ನಾಯಕ ಲಕ್ಷ್ಯ ರಾಯ್‌ಚಂದಾನಿ ಜೊತೆಗೂಡಿ 117 ರನ್‌ಗಳ ಉತ್ತಮ ಜೊತೆಯಾಟವನ್ನೂ ಆಡಿದರು. ಆದರೆ ಅರ್ಧಶತಕ ಪೂರೈಸಿದ ಕೆಲವೇ ಕ್ಷಣಗಳಲ್ಲಿ ವಿಕೆಟ್ ಒಪ್ಪಿಸಿದ್ದು ಅವರ ಪಾಲಿಗೆ ನಿರಾಸೆ ಮೂಡಿಸಿತು.

ಆರ್ಯವೀರ್ ಅರ್ಧಶತಕ

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಆರ್ಯವೀರ್ ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿದರು. ನಾಲ್ಕನೇ ಎಸೆತದಲ್ಲೇ ಬೌಂಡರಿ ಬಾರಿಸಿದರೂ, ನಂತರ ರನ್ ಗಳಿಸಲು ಪರದಾಡಿದರು. ಸ್ಟ್ರೈಕ್ ಬದಲಾಯಿಸುವುದಕ್ಕೂ ಕಷ್ಟಪಟ್ಟರು. ಆದರೆ ಕ್ರೀಸ್‌ನಲ್ಲಿ ಸ್ವಲ್ಪ ಸಮಯ ಕಳೆದ ಬಳಿಕ ತಮ್ಮ ಲಯ ಕಂಡುಕೊಂಡ ಆರ್ಯವೀರ್, ಎದುರಾಳಿ ಬೌಲರ್‌ಗಳ ಮೇಲೆ ಮುಗಿಬಿದ್ದರು. ಅದರಲ್ಲೂ ಸ್ಪಿನ್ನರ್‌ಗಳನ್ನು ಗುರಿಯಾಗಿಸಿಕೊಂಡು ಸಿಕ್ಸರ್‌ಗಳ ಮಳೆ ಸುರಿಸಿದರು.

Loading...

ಪಂದ್ಯದ 13ನೇ ಓವರ್‌ನಲ್ಲಿ ಸೊಹೈಲ್ ಖಾನ್ ಬೌಲಿಂಗ್‌ನಲ್ಲಿ ಎರಡು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದರು. ಇದೇ ಬೌಲರ್ ವಿರುದ್ಧ ಒಟ್ಟು ಮೂರು ಸಿಕ್ಸರ್‌ಗಳನ್ನು ಬಾರಿಸಿದರು. ಕೊನೆಗೆ ಸಿಕ್ಸರ್ ಸಿಡಿಸುವ ಮೂಲಕವೇ ತಮ್ಮ ಅರ್ಧಶತಕ ಪೂರೈಸಿದರು. ಆದರೆ ಮುಂದಿನ ಎಸೆತದಲ್ಲೇ ಪುಲ್ ಶಾಟ್ ಹೊಡೆಯಲು ಹೋಗಿ ವಿಕೆಟ್ ಕಳೆದುಕೊಂಡರು.

ಭರ್ಜರಿ ಫಾರ್ಮ್‌ನಲ್ಲಿ ಆರ್ಯವೀರ್

ಅಂಡರ್-19 ಏಷ್ಯಾ ಕಪ್‌ನಲ್ಲಿ ಆರ್ಯವೀರ್ ಸೆಹ್ವಾಗ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಆಡಿದ ಬಹುತೇಕ ಪಂದ್ಯಗಳಲ್ಲೂ ತಮ್ಮ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ನೇಪಾಳ ವಿರುದ್ಧ ಅಜೇಯ 70 ರನ್ ಸಿಡಿಸಿದ್ದ ಆರ್ಯವೀರ್, ಪಾಕಿಸ್ತಾನ ವಿರುದ್ಧ 22 ರನ್‌ಗಳಿಗೆ ಔಟಾಗಿದ್ದರು. ಆದರೆ ಯುಎಇ ವಿರುದ್ಧ ಮಾತ್ರ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 160 ರನ್‌ಗಳ ಭರ್ಜರಿ ಇನ್ನಿಂಗ್ಸ್ ಆಡಿದ್ದರು. ಇದೀಗ ಅಫ್ಘಾನಿಸ್ತಾನ ವಿರುದ್ಧವೂ 51 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ವಿಶೇಷವೆಂದರೆ, ಅಫ್ಘಾನಿಸ್ತಾನ ವಿರುದ್ಧ ಸಿಕ್ಸರ್ ಬಾರಿಸುವ ಮೂಲಕವೇ ಅರ್ಧಶತಕ ಪೂರೈಸಿದರು. ಈ ಮೂಲಕ ಟೂರ್ನಿಯಲ್ಲಿ ತಮ್ಮ ಸಿಕ್ಸರ್ ಬಾರಿಸುವ ಸಾಮರ್ಥ್ಯವನ್ನೂ ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ.

ಆರ್ಯವೀರ್ ಸೆಹ್ವಾಗ್ ಸದ್ಯ ಅಂಡರ್-19 ಏಷ್ಯಾ ಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ನಾಲ್ಕು ಪಂದ್ಯಗಳಿಂದ ಒಟ್ಟು 303 ರನ್ ಕಲೆಹಾಕಿದ್ದಾರೆ. ಇದರಲ್ಲಿ 29 ಬೌಂಡರಿ ಹಾಗೂ 16 ಸಿಕ್ಸರ್‌ಗಳು ಸೇರಿವೆ. ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್, ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us