
15 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಏಕದಿನ ಕ್ರಿಕೆಟ್‌ನಲ್ಲಿ ಯಾರೂ ಸುಲಭವಾಗಿ ಮುರಿಯಲಾಗದಂತಹ ವಿಶ್ವದಾಖಲೆ ನಿರ್ಮಿಸಿದ್ದಾರೆ. ಯುಎಇ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್, ಕೇವಲ 52 ಎಸೆತಗಳಲ್ಲಿ ದ್ವಿಶತಕ ಪೂರೈಸಿದ್ದಾರೆ. ಈ ಮೂಲಕ 50 ಓವರ್‌ಗಳ ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ದ್ವಿಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದ ವೈಭವ್, ಒಟ್ಟು 53 ಎಸೆತಗಳಲ್ಲಿ 204 ರನ್ ಗಳಿಸಿ ಅಬ್ಬರಿಸಿದರು. ಅವರ ಈ ಸ್ಫೋಟಕ ಇನ್ನಿಂಗ್ಸ್‌ನಲ್ಲಿ ಬರೋಬ್ಬರಿ 28 ಸಿಕ್ಸರ್‌ಗಳು ಹಾಗೂ 7 ಬೌಂಡರಿಗಳ ಸುರಿಮಳೆಯೇ ಹರಿದಿತ್ತು. ಈ ಮೂಲಕ ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.
ಕೇವಲ 52 ಎಸೆತಗಳಲ್ಲಿ ದ್ವಿಶತಕ ಪೂರೈಸಿದ ವೈಭವ್, ನ್ಯೂಜಿಲೆಂಡ್‌ನ ಚಾಡ್ ಬೋವ್ಸ್ ಅವರ ದಾಖಲೆಯನ್ನು ಮುರಿದಿದ್ದಾರೆ. ಚಾಡ್ ಬೋವ್ಸ್ ಈ ಹಿಂದೆ 103 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದರು. ಇಷ್ಟೇ ಅಲ್ಲ, ವೃತ್ತಿಪರ ಕ್ರಿಕೆಟ್‌ನ ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆಯನ್ನೂ ವೈಭವ್ ತಮ್ಮದಾಗಿಸಿಕೊಂಡಿದ್ದಾರೆ. ಯುಎಇ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 28 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಇದಕ್ಕೂ ಮೊದಲು ರಣಜಿ ಟ್ರೋಫಿಯಲ್ಲಿ ಅರುಣಾಚಲ ಪ್ರದೇಶ ವಿರುದ್ಧ 26 ಸಿಕ್ಸರ್ ಸಿಡಿಸಿದ್ದ ತನ್ಮಯ್ ಅಗರ್ವಾಲ್ ಈ ದಾಖಲೆಯನ್ನು ಹೊಂದಿದ್ದರು. 2018ರಲ್ಲಿ ಡಾರ್ಸಿ ಶಾರ್ಟ್ ಲಿಸ್ಟ್ ಎ ಕ್ರಿಕೆಟ್‌ನ ಒಂದೇ ಇನ್ನಿಂಗ್ಸ್‌ನಲ್ಲಿ 23 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇದೀಗ ಈ ಎಲ್ಲ ದಾಖಲೆಗಳನ್ನು ಹಿಂದಿಕ್ಕಿರುವ ವೈಭವ್ ಸೂರ್ಯವಂಶಿ, ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.
15 ಸಿಕ್ಸರ್, 28 ಎಸೆತಗಳಲ್ಲೇ ಶತಕ: ವೈಭವ್ ಅಬ್ಬರಕ್ಕೆ ಕ್ರಿಕೆಟ್ ಜಗತ್ತು ಬೆರಗು
ಯುಎಇ ತಂಡದ ಬೌಲರ್‌ಗಳಿಗೆ ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಅಬ್ಬರವನ್ನು ತಡೆಯಲು ಸಾಧ್ಯವಾಗಲಿಲ್ಲ. ಎದುರಾಳಿ ತಂಡದ ಪ್ರತಿಯೊಬ್ಬ ಬೌಲರ್ ಮೇಲೂ ಮುಗಿಬಿದ್ದ ವೈಭವ್, ಸಿಕ್ಸರ್ ಹಾಗೂ ಬೌಂಡರಿಗಳ ಸುರಿಮಳೆಗೈದರು. ಇಬ್ರಾರ್ ಅಹ್ಮದ್ ಬೌಲಿಂಗ್‌ನಲ್ಲಿ ಕೇವಲ 13 ಎಸೆತಗಳನ್ನು ಎದುರಿಸಿದ ವೈಭವ್, 6 ಸಿಕ್ಸರ್ ಹಾಗೂ 5 ಬೌಂಡರಿಗಳನ್ನು ಸಿಡಿಸಿದರು. ಜಾಹಿದ್ ಅಲಿ ವಿರುದ್ಧವೂ ಅಬ್ಬರ ಮುಂದುವರಿಸಿದ ಅವರು, 14 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ ಒಂದು ಬೌಂಡರಿ ಬಾರಿಸಿದರು.
ಇನ್ನು ಬಾಸಿಲ್ ಹಮೀದ್ ಬೌಲಿಂಗ್‌ನಲ್ಲಿ ಕೇವಲ 12 ಎಸೆತಗಳಲ್ಲಿ 7 ಸಿಕ್ಸರ್‌ಗಳನ್ನು ಸಿಡಿಸಿ ಅಬ್ಬರಿಸಿದರು. ಉದೀಶ್ ಸೂರಿ ಅವರ 9 ಎಸೆತಗಳನ್ನು ಎದುರಿಸಿ 6 ಸಿಕ್ಸರ್‌ಗಳನ್ನು ಬಾರಿಸಿದರು. ಸಿಮ್ರನ್‌ಜೀತ್ ಸಿಂಗ್ ಬೌಲಿಂಗ್‌ನಲ್ಲೂ ಅಬ್ಬರಿಸಿದ ವೈಭವ್, ಕೇವಲ 5 ಎಸೆತಗಳಲ್ಲಿ 3 ಸಿಕ್ಸರ್‌ಗಳನ್ನು ಸಿಡಿಸಿ ಯುಎಇ ಬೌಲರ್‌ಗಳ ಬೆವರಿಳಿಸಿದರು. ಈ ಮೂಲಕ ಎದುರಾಳಿ ತಂಡದ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ ವೈಭವ್, ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ಬೆರಗುಗೊಳಿಸಿದರು.
Published On - 5:13 pm, Tue, 24 November 26