
ಕಾನ್ಪುರದ ಗ್ರೀನ್ ಪಾರ್ಕ್ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದ ಕೆಎಲ್ ರಾಹುಲ್ ವಿಸ್ಪೋಟಕ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 233 ರನ್ಗಳಿಸಿ ಆಲೌಟ್ ಆಗಿತ್ತು.
ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಮೊದಲ ವಿಕೆಟ್ಗೆ 55 ರನ್ ಪೇರಿಸಿದ ಬಳಿಕ ರೋಹಿತ್ ಶರ್ಮಾ (23) ಔಟಾದರು. ಇನ್ನು ಶುಭ್ಮನ್ ಗಿಲ್ 39 ರನ್ ಬಾರಿಸಿದರೆ, ರಿಷಭ್ ಪಂತ್ 9 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯಶಸ್ವಿ ಜೈಸ್ವಾಲ್ 51 ಎಸೆತಗಳಲ್ಲಿ 12 ಫೋರ್ ಹಾಗೂ 2 ಸಿಕ್ಸ್ನೊಂದಿಗೆ 72 ರನ್ ಚಚ್ಚಿದರು. ಇನ್ನು ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.
ಅದರಲ್ಲೂ ಸ್ಪೋಟಕ ಇನಿಂಗ್ಸ್ಗೆ ಒತ್ತು ನೀಡಿದ ಕೆಎಲ್ ರಾಹುಲ್ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದರು. ಅಲ್ಲದೆ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅತ್ತ ಕೆಎಲ್ ರಾಹುಲ್ ಹಾಫ್ ಸೆಂಚುರಿ ಪೂರೈಸುತ್ತಿದ್ದಂತೆ ವಿರಾಟ್ ಕೊಹ್ಲಿ ಫುಲ್ ಖುಷಿಯಾದರು.
ಅಲ್ಲದೆ ರಾಹುಲ್ ಅವರನ್ನು ಅಪ್ಪುಗೆಯೊಂದಿಗೆ ಅಭಿನಂದಿಸಿದ ಕೊಹ್ಲಿ ಎದೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡರು. ವಿರಾಟ್ ಕೊಹ್ಲಿಯ ಈ ಅಪ್ಪುಗೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 47 ರನ್ ಬಾರಿಸಿದರೆ, ಕೆಎಲ್ ರಾಹುಲ್ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 68 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 34.4 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 285 ರನ್ಗಳಿಸಿ ಪ್ರಥಮ ಇನಿಂಗ್ಸ್ ಡಿಕ್ಲೇರ್ ಘೋಷಿಸಿದೆ.
ಇದನ್ನೂ ಓದಿ: IND vs BAN Test: ದಾಖಲೆಗಳ ಮೇಲೆ ದಾಖಲೆ ಬರೆದ ಟೀಮ್ ಇಂಡಿಯಾ
ಇದೀಗ 52 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ್ ತಂಡವು 30 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 94 ರನ್ ಕಲೆಹಾಕಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಚಾನ್ಸ್ ಹೆಚ್ಚಿದೆ ಎನ್ನಬಹುದು.