West Indies vs India, 3rd ODI: ಟ್ರಿನಿಡಾಡ್ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡದ ನಾಯಕ ಶಾಯ್ ಹೋಪ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಹಾಗೂ ಶುಭ್ಮನ್ ಗಿಲ್ ಇನಿಂಗ್ಸ್ ಆರಂಭಿಸಿದರು.
ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಮೊದಲ ವಿಕೆಟ್ಗೆ 143 ರನ್ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 64 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 77 ರನ್ ಬಾರಿಸಿದ್ದ ಇಶಾನ್ ಕಿಶನ್ ಔಟಾದರು. ಆ ಬಳಿಕ ಬಂದ ರುತುರಾಜ್ ಗಾಯಕ್ವಾಡ್ ಕೇವಲ 8 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. 41 ಎಸೆತಗಳನ್ನು ಎದುರಿಸಿದ ಸ್ಯಾಮ್ಸನ್ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 51 ರನ್ ಬಾರಿಸಿ ನಿರ್ಗಮಿಸಿದರು.
ಇದರ ನಡುವೆ ಮತ್ತೊಂದೆಡೆ ಶುಭ್ಮನ್ ಗಿಲ್ ತಮ್ಮ ಆಕರ್ಷಕ ಇನಿಂಗ್ಸ್ ಮುಂದುವರೆಸಿದ್ದರು. 92 ಎಸೆತಗಳನ್ನು ಎದುರಿಸಿದ್ದ ಗಿಲ್ 11 ಫೋರ್ಗಳೊಂದಿಗೆ 85 ರನ್ ಬಾರಿಸಿ ಶತಕದತ್ತ ಹೆಜ್ಜೆ ಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಮೋಟಿ ಎಸೆತದಲ್ಲಿ ಕ್ಯಾಚ್ ನೀಡುವ ಮೂಲಕ ಶುಭ್ಮನ್ ಗಿಲ್ (85) ಕೂಡ ವಿಂಡೀಸ್ ವಿರುದ್ಧ ಶತಕ ಸಿಡಿಸುವ ಅವಕಾಶ ಕೈ ತಪ್ಪಿಸಿಕೊಂಡರು.
ಇನ್ನು ಐದನೇ ವಿಕೆಟ್ಗೆ ಜೊತೆಯಾದ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ 65 ರನ್ಗಳ ಜೊತೆಯಾಟವಾಡಿದರು. ಇದೇ ವೇಳೆ 35 ರನ್ಗಳಿಸಿದ್ದ ಸೂರ್ಯಕುಮಾರ್ ಯಾದವ್ ಕ್ಯಾಚಿತ್ತು ನಿರ್ಗಮಿಸಿದರು. ಇನ್ನೊಂದೆಡೆ 45 ಎಸೆತಗಳಲ್ಲಿ ಹಾರ್ದಿಕ್ ಪಾಂಡ್ಯ ಅರ್ಧಶತಕ ಪೂರೈಸಿದರು.
ಅಂತಿಮವಾಗಿ ಹಾರ್ದಿಕ್ ಪಾಂಡ್ಯ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 70 ರನ್ ಹಾಗೂ ರವೀಂದ್ರ ಜಡೇಜಾ ಅಜೇಯ 8 ರನ್ ಬಾರಿಸಿದರು. ಈ ಮೂಲಕ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 351 ರನ್ ಕಲೆಹಾಕಿತು. ಈ ಮೂಲಕ ಭಾರತ ತಂಡವು ವೆಸ್ಟ್ ಇಂಡೀಸ್ ತಂಡಕ್ಕೆ 352 ರನ್ಗಳ ಕಠಿಣ ಗುರಿ ನೀಡಿದೆ.
ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್(ವಿಕೆಟ್ ಕೀಪರ್), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್, ಕುಲದೀಪ್ ಯಾದವ್, ಮುಖೇಶ್ ಕುಮಾರ್.
ಇದನ್ನೂ ಓದಿ: India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್ರೌಂಡರ್ಗಳು..!
ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಶಾಯ್ ಹೋಪ್(ನಾಯಕ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಝಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್.
Published On - 10:59 pm, Tue, 1 August 23