IND vs SA: ಏಕದಿನ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ
India vs South Africa: ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಏಕದಿನ ಪಂದ್ಯವು ಗೆಬ್ಬೆಗಾದ ಸೇಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂನಲ್ಲಿ ನಾಳೆ (ಡಿ.19) ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಗೆಲ್ಲಲೇಬೇಕು. ಹೀಗಾಗಿ 2ನೇ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ನಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಅರ್ಷದೀಪ್ ಸಿಂಗ್ ಹಾಗೂ ಅವೇಶ್ ಖಾನ್ ದಾಳಿಗೆ ತತ್ತರಿಸಿತು. ಪರಿಣಾಮ ಕೇವಲ 116 ರನ್ಗಳಿಗೆ ಆಲೌಟ್ ಆಗಿದೆ. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಾಯಿ ಸುದರ್ಸನ್ (55) ಹಾಗೂ ಶ್ರೇಯಸ್ ಅಯ್ಯರ್ (52) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ 16.4 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಆದರೆ ಈ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದ ಶ್ರೇಯಸ್ ಅಯ್ಯರ್ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರು ಟೆಸ್ಟ್ ತಂಡವನ್ನು ಸೇರಿಕೊಳ್ಳುತ್ತಿರುವುದು. ಅಂದರೆ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಭಾಗವಾಗಿದ್ದು, ಹಾಗಾಗಿ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ ಪಂದ್ಯಗಳಾಗಿವೆ.
ಇದೇ ಕಾರಣದಿಂದಾಗಿ ಶ್ರೇಯಸ್ ಅಯ್ಯರ್ ಅವರಿಗೆ ಏಕದಿನ ಸರಣಿಯಿಂದ ಹೊರಗುಳಿಯಲು ಬಿಸಿಸಿಐ ತಿಳಿಸಿದೆ. ಅಲ್ಲದೆ ಈಗಾಗಲೇ ಅಭ್ಯಾಸ ಆರಂಭಿಸಿರುವ ಭಾರತ ಟೆಸ್ಟ್ ತಂಡವನ್ನು ಕೂಡಿಕೊಳ್ಳುವಂತೆ ತಿಳಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ 2ನೇ ಮತ್ತು 3ನೇ ಏಕದಿನ ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಅಲಭ್ಯರಾಗಲಿದ್ದಾರೆ. ಇತ್ತ ಅಯ್ಯರ್ ಹೊರಗುಳಿದರೆ ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್ ಅಥವಾ ರಜತ್ ಪಾಟಿದಾರ್ ಕಣಕ್ಕಿಳಿಯುವ ಸಾಧ್ಯತೆಯಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.
ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
- ಜನವರಿ 3 ರಿಂದ- ಎರಡನೇ ಟೆಸ್ಟ್ ಪಂದ್ಯ (ಕೇಪ್ಟೌನ್).
ಇದನ್ನೂ ಓದಿ:IPL 2024 Auction: ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ
ಮೊಹಮ್ಮದ್ ಶಮಿ ಅಲಭ್ಯ:
ಏಕದಿನ ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಪಾದದ ನೋವಿನ ಕಾರಣ ಮೈದಾನದಿಂದ ದೂರ ಉಳಿದಿರುವ ಶಮಿ ಟೆಸ್ಟ್ ಸರಣಿ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೀಗ ಸಂಪೂರ್ಣ ಫಿಟ್ನೆಸ್ ಸಾಧಿಸದ ಕಾರಣ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೈ ಬಿಡಲಾಗಿದೆ.