
ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ (Women’s World Cup 2025) ಸೆಪ್ಟೆಂಬರ್ 30 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಗೆ ಭಾರತ ಕೂಡ ತಯಾರಿ ನಡೆಸುತ್ತಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಇದರಲ್ಲಿ ಪಾಕಿಸ್ತಾನ ತಂಡವೂ ಒಂದಾಗಿದೆ. ಈ ಬಾರಿಯ ವಿಶ್ವಕಪ್ ಭಾರತದಲ್ಲಿ ನಡೆಯುತ್ತಿದೆಯಾದರೂ ಪಾಕಿಸ್ತಾನದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಅದರಂತೆ ವೇಳಾಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಆದರೆ ಪಂದ್ಯಾವಳಿ ಆರಂಭಕ್ಕೂ ಮುನ್ನ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಾಕಿಸ್ತಾನ ಮಹಿಳಾ ತಂಡ ಪಾಲ್ಗೊಳ್ಳುವುದಿಲ್ಲ ಎಂದು ವರದಿಯಾಗಿದೆ.
ಮೇಲೆ ಹೇಳಿದಂತೆ ಮಹಿಳಾ ಏಕದಿನ ವಿಶ್ವಕಪ್ ಸೆಪ್ಟೆಂಬರ್ 30 ರಂದು ಆರಂಭವಾಗಲಿದೆ. ಅದೇ ದಿನ ಗುವಾಹಟಿಯ ಡಾ. ಭೂಪೇನ್ ಹಜಾರಿಕಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದರ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಎಲ್ಲಾ ತಂಡಗಳು ಈ ಸಮಾರಂಭದಲ್ಲಿ ಭಾಗವಹಿಸಲಿವೆ, ಆದರೆ ಪಾಕಿಸ್ತಾನ ತಂಡ ಇದಕ್ಕಾಗಿ ಭಾರತಕ್ಕೆ ಬರುವುದಿಲ್ಲ.
ಎಎನ್‌ಐ ವರದಿಗಳ ಪ್ರಕಾರ, ನಾಯಕಿ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಜಿಯೋ ಸೂಪರ್ ಉಲ್ಲೇಖಿಸಿದೆ. ವರದಿಗಳ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್ ಅನ್ನು ಭಾರತ ಆಯೋಜಿಸುತ್ತಿದೆ. ಇದರ ಹೊರತಾಗಿಯೂ, ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಬಿಸಿಸಿಐ ಮತ್ತು ಪಿಸಿಬಿ ನಡುವೆ ಈ ಬಗ್ಗೆ ಒಪ್ಪಂದವಾಗಿದ್ದು ಇದರ ಪ್ರಕಾರ, ಮುಂದಿನ ಮೂರು ವರ್ಷಗಳ ಕಾಲ ಎರಡೂ ತಂಡಗಳು ಪರಸ್ಪರರ ದೇಶದಲ್ಲಿ ಯಾವುದೇ ಪಂದ್ಯಗಳನ್ನು ಆಡುವುದಿಲ್ಲ.
ಅದರಂತೆ ಪಾಕಿಸ್ತಾನ ಆಯೋಜಿಸಿದ್ದ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿತ್ತು. ಅದೇ ರೀತಿ, ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ, ಪಾಕಿಸ್ತಾನ ಮಹಿಳಾ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದ ಕೊಲಂಬೊದಲ್ಲಿ ಆಡಲಿದೆ. ಈ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಅಕ್ಟೋಬರ್ 2 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಕ್ಟೋಬರ್ 5 ರಂದು ಕೊಲಂಬೊದಲ್ಲಿ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ