ವುಮೆನ್ಸ್ ಪ್ರೀಮಿಯರ್ ಲೀಗ್ನ (WPL 2024) 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳಿಗೂ ಈ ಪಂದ್ಯವು ತುಂಬಾ ಮಹತ್ವದ್ದು. ಏಕೆಂದರೆ ಕಳೆದ ಪಂದ್ಯಗಳಲ್ಲಿ ಎರಡೂ ತಂಡಗಳು ಸೋತಿದ್ದು, ಇದೀಗ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ.
ಸತತ ಎರಡು ಗೆಲುವಿನೊಂದಿಗೆ ಭರ್ಜರಿ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲುಣಿಸಿತ್ತು. ಹಾಗೆಯೇ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಕಳೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಗೆದ್ದು ಬೀಗಿದೆ. ಹೀಗಾಗಿ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.
ಅದರಲ್ಲೂ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಸದ್ಯ ಆರ್ಸಿಬಿ ತಂಡವು ದ್ವಿತೀಯ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಈ ಪಂದ್ಯದ ಬಳಿಕ ಪಾಯಿಂಟ್ಸ್ ಟೇಬಲ್ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.
ವಿಶೇಷ ಎಂದರೆ ಉಭಯ ತಂಡಗಳನ್ನು ಮುನ್ನಡೆಸುತ್ತಿರುವುದು ಭಾರತೀಯ ಆಟಗಾರ್ತಿಯರು. ಅಂದರೆ ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವನ್ನು ಭಾರತದ ಉಪನಾಯಕಿ ಸ್ಮೃತಿ ಮಂಧಾನ ವಹಿಸಿಕೊಂಡಿದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಯಾರು ಬೆಸ್ಟ್ ಕ್ಯಾಪ್ಟನ್ ಎಂಬುದು ಕೂಡ ಈಗ ಕುತೂಹಲ.
WPL 2023 ರಲ್ಲಿ ಉಭಯ ತಂಡಗಳು 2 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಎರಡೂ ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ತಂಡ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ ಆರ್ಸಿಬಿ.