
ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್‌ನ ಲೀಗ್ ಹಂತದ 20ನೇ ಮತ್ತು ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ (DC vs UPW) ಪರಸ್ಪರ ಮುಖಾಮುಖಿಯಾಗಿದ್ದವು. ಬರೋಡಾದ ಕೋಟಂಬಿಯಲ್ಲಿರುವ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಡೆಲ್ಲಿ ತಂಡದ ಈ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ. ವಾಸ್ತವವಾಗಿ ಮುಂಬೈ ತಂಡ ಎಲಿಮಿನೇಟರ್‌ಗೆ ಅರ್ಹತೆ ಪಡೆಯಬೇಕಿದ್ದರೆ, ಈ ಪಂದ್ಯದಲ್ಲಿ ಡೆಲ್ಲಿ ಸೋಲಬೇಕಿತ್ತು. ಆದರೆ ಅದು ನಡೆಯಲಿಲ್ಲ. ಹೀಗಾಗಿ ಎಲಿಮಿನೇಟರ್‌ನಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳಿಗೆ 122 ರನ್ ಗಳಿಸಿತು. ದೀಪ್ತಿ ಶರ್ಮಾ ತಂಡದ ಪರ ಅತ್ಯಧಿಕ 24 ರನ್‌ಗಳ ಇನ್ನಿಂಗ್ಸ್ ಆಡಿದರು. ಸಿಮ್ರಾನ್ ಶೇಖ್ 22 ರನ್‌ಗಳ ಇನ್ನಿಂಗ್ಸ್ ಆಡಿದರೆ, ಕೊನೆಯಲ್ಲಿ ಶಿಖಾ ಪಾಂಡೆ ಕೂಡ 23 ರನ್‌ಗಳ ಕಾಣಿಕೆ ನೀಡಿದರು. ಈ ಮೂವರನ್ನು ಹೊರತುಪಡಿಸಿ ಉಳಿದವರಿಂದ ಉತ್ತಮ ಇನ್ನಿಂಗ್ಸ್ ಮೂಡಿಬರಲಿಲ್ಲ. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್, ವೋಲ್ವಾರ್ಡ್ ಅವರ 47 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಹಾಗೂ ನಾಯಕಿ ಜೆಮಿಮಾ ರೊಡ್ರಿಗಸ್ ಅವರ ಅಜೇಯ 34 ರನ್‌ಗಳ ಸಹಾಯದಿಂದ 18.4 ಓವರ್‌ಗಳಲ್ಲಿ 126 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗಾಗಲೇ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಹೀಗಾಗಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಎಲಿಮಿನೇಟರ್ ಪಂದ್ಯವು ಫೆಬ್ರವರಿ 3 ರಂದು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯದ ನಂತರ ಫೆಬ್ರವರಿ 5 ರಂದು ಫೈನಲ್ ನಡೆಯಲಿದೆ. ಆರ್‌ಸಿಬಿ ತಂಡವು ಫೈನಲ್‌ನಲ್ಲಿ ಎಲಿಮಿನೇಟರ್ ಪಂದ್ಯದ ವಿಜೇತರನ್ನು ಎದುರಿಸಲಿದೆ.
WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್ಗೇರಿದ ಗುಜರಾತ್
ಈ ಪಂದ್ಯದೊಂದಿಗೆ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳ ಪ್ರಯಾಣ ಲೀಗ್ ಹಂತದಲ್ಲೇ ಕೊನೆಗೊಂಡಿದೆ. ಮುಂಬೈ ಇಂಡಿಯನ್ಸ್ ಗುಂಪು ಹಂತದಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಗೆದ್ದು ಐದರಲ್ಲಿ ಸೋತು, ಆರು ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಗಳಿಸಿದರೆ, ಯುಪಿ ವಾರಿಯರ್ಸ್ ಕೂಡ ಗುಂಪು ಹಂತದ ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆದ್ದು ಆರರಲ್ಲಿ ಸೋತಿದೆ. ಹೀಗಾಗಿ ನಾಲ್ಕು ಅಂಕಗಳೊಂದಿಗೆ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:48 pm, Sun, 1 February 26