ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೇರಲು ಭಾರತದ ಹಾದಿ ಇನ್ನಷ್ಟು ಸುಗಮ
ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಮಾಡಿಕೊಂಡ ಎಡವಟ್ಟಿನಿಂದಾಗಿ 2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವ ರೇಸ್‌ನಲ್ಲಿ ಮಹತ್ವದ ಬದಲಾವಣೆಯಾಗಿದೆ. ಭಾರತ ಕ್ರಿಕೆಟ್ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಮತ್ತಷ್ಟು ಸುಗಮವಾಗಿದೆ.
ಕ್ರೈಸ್ಟ್ ಚರ್ಚ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ನ್ಯೂಜಿಲೆಂಡ್ ತಂಡಕ್ಕೆ ಐಸಿಸಿ ದಂಡ ವಿಧಿಸಿದೆ. ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳಿಗೆ ದಂಡ ವಿಧಿಸುವುದರ ಜೊತೆಗೆ ಎರಡೂ ತಂಡಗಳ ಮೂರು ಡಬ್ಲ್ಯುಟಿಸಿ ಅಂಕಗಳನ್ನು ಕಡಿತಗೊಳಿಸಲಾಗಿದೆ. ಇದು ಶ್ರೇಯಾಂಕ ಪಟ್ಟಿಯಲ್ಲಿ ಕುಸಿತಕ್ಕೆ ಕಾರಣವಾಗಿದೆ. ಹೀಗಾಗಿ ಭಾರತ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಸುಗಮವಾಗಿಸಿದೆ.
ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಪಟ್ಟಿಯಲ್ಲಿ ಭಾರತ (61.11% ಗೆಲುವಿನ ಶೇಕಡಾವಾರು) ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ (59.26%) ಎರಡನೇ ಸ್ಥಾನದಲ್ಲಿದೆ ಮತ್ತು ಆಸ್ಟ್ರೇಲಿಯಾ (57.26) ಮೂರನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ (47.92)) ಮತ್ತು ಶ್ರೀಲಂಕಾ 50% ಪಾಯಿಂಟ್‌ಗಳನ್ನು ಹೊಂದಿದೆ. ಇನ್ನು 47.92 ಪಾಯಿಂಟ್ಸ್ ಹೊಂದಿರುವ ನ್ಯೂಜಿಲೆಂಡ್ನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸು ಬಹುತೇಕ ಕಮರಿದೆ. ಒಂದು ವೇಳೆ ಕಿವೀಸ್, ಇಂಗ್ಲೆಂಡ್ ವಿರುದ್ಧದ ಉಳಿದ ಎರಡು ಪಂದ್ಯಗಳನ್ನು ಗೆದ್ದರೂ ಸಹ 55.36 ಮಾತ್ರ ಅಂಕ ಗಳಿಸಬಹುದು ಅಷ್ಟೇ.
ಇದನ್ನೂ ಓದಿ: ಈ ವಾರ 6 ತಂಡಗಳ ನಡುವೆ ಟೆಸ್ಟ್ ಫೈಟ್
ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ 0-3 ಅಂತರದಲ್ಲಿ ಸರಣಿ ಸೋತ ಭಾರತಕ್ಕೆ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಭಾರಿ ಹಿನ್ನಡೆಯಾಯ್ತು. ಸರಣಿ ಮುಗಿದ ಬೆನ್ನಲ್ಲೇ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕಿಳಿದ ಭಾರತ, ಆ ಬಳಿಕ ಆಸೀಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಗೆದ್ದ ಬಳಿಕ ಮತ್ತೆ ಅಗ್ರಸ್ಥಾನಕ್ಕೆ ಮರಳಿತು. ಇದೀಗ ಫೈನಲ್ ಪ್ರವೇಶಿಸಲು ಕಠಿಣ ಹೋರಾಟ ನಡೆಸುತ್ತಿದೆ. ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಭಾರತ ತಂಡ ಪರ್ತ್ ಟೆಸ್ಟ್ ಗೆದ್ದ ಬಳಿಕ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಶೇಕಡಾವಾರು ಅಂಕ 60ಕ್ಕಿಂತ ಹೆಚ್ಚಾಗಿದೆ. ಇದರ ಮಧ್ಯ ಇದೀಗ ನ್ಯೂಜಿಲೆಂಡ್ ಹಾಗೂ ಇಂಗ್ಲೇಡ್ ನಡುವಿನ ಹೊಸ ಬೆಳವಣಿಗೆಯಿಂದಾಗಿ ಭಾರತಕ್ಕೆ ಮತ್ತಷ್ಟು ಹಾದಿ ಸುಗಮವಾದಂತಾಗಿದೆ.
ಮುಂದಿನ ವರ್ಷ ಲಾರ್ಡ್ಸ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೇರುವ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಹೋರಾಟ ಅಂತ್ಯಗೊಂಡಿದೆ. ಎರಡೂ ತಂಡಗಳಿಗೆ ತಮ್ಮ ಪಂದ್ಯದ ಶುಲ್ಕದ ಶೇಕಡಾ 15 ರಷ್ಟು ದಂಡವನ್ನು ವಿಧಿಸಲಾಗಿದೆ. ಮತ್ತು ಮೂರು ನಿರ್ಣಾಯಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಗಳನ್ನು ಕಡಿತಗೊಳಿಸಲಾಗಿದೆ. ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಎರಡೂ ತಂಡಗಳು ಗುರಿಗಿಂತ ಮೂರು ಓವರ್‌ಗಳು ಕಡಿಮೆಯಾಗಿರುವುದು ಕಂಡುಬಂದಿದೆ. ಹೀಗಾಗಿ ಪ್ರತಿ ಓವರ್‌ಗೆ ಒಂದು ಅಂಕದಂತೆ ಕಡಿತಗೊಳಿಸಲಾಗಿದೆ. ಹೀಗಾಗಿ ಉಭಯ ತಂಡಗಳ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸು ಭಗ್ನಗೊಂಡಿದೆ ಎಂದು ಐಸಿಸಿ ತಿಳಿಸಿದೆ.
ಮುಂದಿನ ವರ್ಷ ಜೂನ್ 11 ರಿಂದ ಲಂಡನ್‌ನ ಲಾರ್ಡ್ಸ್ ಅಂಗಳದಲ್ಲಿ ಡಬ್ಲ್ಯೂಟಿಸಿ ಫೈನಲ್ ಪಂದ್ಯ ನಡೆಯಲಿದ್ದು, ಟೀಮ್ ಇಂಡಿಯಾ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್ ತಲುಪುವ ಹಾದಿಯನ್ನು ಸುಲಭಗೊಳಿಸುವ ನಿರೀಕ್ಷೆಯಲ್ಲಿದೆ.
ಆಸ್ಟ್ರೇಲಿಯಾ ವಿರುದ್ಧ ಪರ್ತ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಮರಳಿ ಪಡೆದಿದೆ. ಸೋಲು ಕಂಡ ಆಸ್ಟ್ರೇಲಿಯಾ ಎರಡನೇ ಸ್ಥಾನಕ್ಕೆ ಜಾರಿದೆ. ಇದಾದ ಬಳಿಕ ಶ್ರೀಲಂಕಾ ವಿರುದ್ದ ಗೆದ್ದ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಒಂದು ಸ್ಥಾನ ಕೆಳಗಿಳಿಸಿದೆ. ಇದೀಗ ಆಫ್ರಿಕಾ ತಂಡ ಎರಡನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ಡಬ್ಲ್ಯೂಟಿಸಿ ಅಂಕಪಟ್ಟಿಯನ್ನು ಅಂತಿಮಗೊಳ್ಳಲು ಇನ್ನೂ ಕೆಲವು ತಿಂಗಳುಗಳು ಬಾಕಿಯಿದ್ದರೂ, ಫೈನಲ್ ತಲುಪಲು ಪ್ರಬಲ ಪೈಪೋಟಿ ಏರ್ಪಟ್ಟಿದೆ.