IPL 2023: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್ಗೆ ಅರ್ಹತೆ ಪಡೆದರೆ, ಲಕ್ನೋ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಕ್ಯಾಮರೋನ್ ಗ್ರೀನ್ (41) ಹಾಗೂ ಸೂರ್ಯಕುಮಾರ್ ಯಾದವ್ (33) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿತು.
183 ರನ್ಗಳ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೇವಲ 101 ರನ್ಗಳಿಗೆ ಆಲೌಟ್ ಆಗುವ ಮೂಲಕ 81 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.
ಅತ್ತ ಭರ್ಜರಿ ಜಯ ಸಾಧಿಸಿರುವ ರೋಹಿತ್ ಶರ್ಮಾ ಪಡೆದ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಮೇ 26 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಅಹಮದಾಬಾದ್ನಲ್ಲಿ ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಮೇ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಅದರಂತೆ ಮುಂಬೈ ಇಂಡಿಯನ್ಸ್ ಅಥವಾ ಗುಜರಾತ್ ಟೈಟಾನ್ಸ್...ಇಬ್ಬರಲ್ಲಿ ಯಾರು ಫೈನಲ್ ಪ್ರವೇಶಿಸಲಿದೆ ಎಂದು ತಿಳಿಯಲು ಶುಕ್ರವಾರದವರೆಗೆ ಕಾಯಲೇಬೇಕು.