
ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು (Sports Ministry) 2023 ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅದರಂತೆ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ (Mohammed Shami) ಸೇರಿದಂತೆ 26 ಅಥ್ಲೀಟ್‌ಗಳು ಅರ್ಜುನ ಪ್ರಶಸ್ತಿಗೆ (Arjuna award) ಭಾಜನರಾಗಿದ್ದಾರೆ. ಹಾಗೆಯೇ ಬ್ಯಾಡ್ಮಿಂಟನ್ ಸ್ಟಾರ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ (Satwik Sairaj Rankireddy and Chirag Shetty) ಅವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ (Khel Ratna) ಪ್ರಶಸ್ತಿ ಒಲಿದಿದೆ. ಇಷ್ಟು ಕ್ರೀಡಾಪಟುಗಳಿಗೆ 2024 ರ ಜನವರಿ 9 ರಂದು ನಡೆಯಲ್ಲಿರುವ ಸಮಾರಂಭದಲ್ಲಿ ರಾಷ್ಟ್ರಪತಿಗಳು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಅರ್ಜುನ ಮತ್ತು ಖೇಲರತ್ನ ಪ್ರಶಸ್ತಿಗೆ 19 ವಿವಿಧ ಕ್ರೀಡೆಗಳ 28 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಮೊಹಮ್ಮದ್ ಶಮಿ ಸೇರಿದಂತೆ ಒಟ್ಟು 26 ಆಟಗಾರರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದು ವಿವಿಧ ಕ್ರೀಡೆಗಳ ಪ್ರಮುಖ ಆಟಗಾರರನ್ನು ಒಳಗೊಂಡಿದೆ. ಬ್ಯಾಡ್ಮಿಂಟನ್ ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರಿಗೆ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಜೋಡಿಯು ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿತ್ತು.
ಇತ್ತೀಚೆಗಷ್ಟೇ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಉತ್ತಮ ಪ್ರದರ್ಶನ ನೀಡಿದ್ದರು. ಶಮಿ 2023ರ ಏಕದಿನ ವಿಶ್ವಕಪ್‌ನ 7 ಪಂದ್ಯಗಳಲ್ಲಿ 24 ವಿಕೆಟ್‌ಗಳನ್ನು ಕಬಳಿಸಿದ್ದರು. ಈ ಮೂಲಕ 2023ರ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಶಮಿ ಅವರ ಈ ಗಮನಾರ್ಹ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ಗೆ ಲಗ್ಗೆ ಇಟ್ಟಿತ್ತು. ಆದರೆ ಪ್ರಶಸ್ತಿ ಸುತ್ತಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತ್ತು. ಇನ್ನು ಭಾರತದ ಪರ ಎಲ್ಲಾ ಮೂರು ಮಾದರಿಗಳಲ್ಲಿ ಕ್ರಿಕೆಟ್ ಆಡುತ್ತಿರುವ ಶಮಿ ಅವರ ಅದ್ಭುತ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಅರ್ಜುನ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:29 pm, Wed, 20 December 23