ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತೀಯ ಜೋಡಿ
Satwiksairaj Rankireddy and Chirag Shetty : 2023 ರಲ್ಲಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಇದೀಗ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲೂ ಪರಾಕ್ರಮ ಮೆರೆದಿದ್ದಾರೆ. ಈ ಮೂಲಕ ಮತ್ತೊಮ್ಮೆ ಭಾರತಕ್ಕೆ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ಯಾರಿಸ್‌ನಲ್ಲಿ ನಡೆದ 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಈ ಪದಕದೊಂದಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಡಬಲ್ಸ್ನಲ್ಲಿ ಭಾರತದ ಪರ ಎರಡು ಪದಕಗಳನ್ನು ಗೆದ್ದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಸಾತ್ವಿಕ್-ಚಿರಾಗ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2022 ರಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಂಚಿನ ಪದಕ ಗೆದ್ದಿದ್ದರು.
ಸೆಮಿಫೈನಲ್‌ನಲ್ಲಿ ಸೋಲು:
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಡಬಲ್ಸ್ನಲ್ಲಿ ಸೆಮಿಫೈನಲ್ಗೇರಿದ್ದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಈ ಬಾರಿ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ನಿರ್ಣಾಯಕ ಪಂದ್ಯದಲ್ಲಿ ಚೀನಾದ ಲಿ ಯಿಯು ಮತ್ತು ಬೊ ಯಾಂಗ್ ಚೆನ್ ವಿರುದ್ಧ 19-21, 21-18, 12-21 ಅಂತರದಿಂದ ಸೋಲನುಭವಿಸಿದ್ದಾರೆ.
ಈ ಸೋಲಿನ ಹೊರತಾಗಿಯೂ ಮೂರನೇ ಸ್ಥಾನ ಪಡೆಯುವ ಮೂಲಕ ಸಾತ್ವಿಕ್ – ಚಿರಾಗ್ ಜೋಡಿಯು ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಮೂಲಕ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಡಬಲ್ಸ್ನಲ್ಲಿ ಎರಡು ಬಾರಿ ಪದಕ ಗೆದ್ದ ಭಾರತದ ಮೊದಲ ಜೋಡಿ ಎನಿಸಿಕೊಂಡಿದ್ದಾರೆ.
ಏಷ್ಯನ್ ಚಾಂಪಿಯನ್‌ಶಿಪ್ ಗೆದಿದ್ದ ಜೋಡಿ:
ಇದಕ್ಕೂ ಮುನ್ನ 2023 ರಲ್ಲಿ ದುಬೈನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಇತಿಹಾಸ ಸೃಷ್ಟಿಸಿದ್ದರು. ಫೈನಲ್ ಪಂದ್ಯದಲ್ಲಿ ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.
ಅಲ್ಲದೆ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಡಬಲ್ಸ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಜೋಡಿ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ದೀಪ್ ಘೋಸ್ ಮತ್ತು ರಾಮನ್ ಘೋಸ್ ಜೋಡಿ 1971ರಲ್ಲಿ ನಡೆದ ಈ ಟೂರ್ನಿಯಲ್ಲಿ ಸೆಮಿಫೈನಲ್‌ವರೆಗೆ ತಲುಪಿತ್ತು. ಆದರೆ, ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು.
ಇದನ್ನೂ ಓದಿ: ಅಲೆಕ್ಸ್ ಅಬ್ಬರಕ್ಕೆ ಕ್ರಿಸ್ ಗೇಲ್ ವಿಶ್ವ ದಾಖಲೆಯೇ ಶೇಕಿಂಗ್
ಆದರೆ 52 ವರ್ಷಗಳ ಏಷ್ಯಾದ ಅಂಗಳದಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಯಶಸ್ವಿಯಾಗಿದ್ದರು. ಇದೀಗ ವಿಶ್ವ ಬ್ಯಾಡ್ಮಿಂಟನ್ನಲ್ಲೂ 2ನೇ ಬಾರಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೇರಿಸಿದ್ದಾರೆ.
