ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ತೇಜಸ್ವಿ ಸೂರ್ಯ, ರಾಷ್ಟ್ರ ಮಟ್ಟದಲ್ಲಿ ಹೋರಾಟ
ಕರ್ನಾಟಕ ಸರ್ಕಾರದಿಂದ ಮುಸ್ಲಿಮರಿಗೆ ಶೇಕಡಾ ೪ರಷ್ಟು ಮೀಸಲಾತಿ ಘೋಷಣೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಇದನ್ನು ಅಸಾಂವಿಧಾನಿಕ ಎಂದು ಕರೆದಿದ್ದಾರೆ ಮತ್ತು ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಈ ಮೀಸಲಾತಿಯನ್ನು ಹಿಂಪಡೆಯಬೇಕೆಂದು ಬಿಜೆಪಿ ಆಗ್ರಹಿಸಿದೆ. ಇದು ವೋಟ್ ಬ್ಯಾಂಕ್ ರಾಜಕಾರಣ ಎಂದು ಬಿಜೆಪಿ ಆರೋಪಿಸಿದೆ.
ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವುದಾಗಿ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದ್ದು, ರಾಷ್ಟ್ರಮಟ್ಟದಲ್ಲಿ ಧ್ವನಿ ಎತ್ತಲು ತೀರ್ಮಾನಿಸಿದೆ. ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುವ ವಿಚಾರವನ್ನು ಬಿಜೆಪಿ ಸಂಸದ ತೇಜ್ವಸ್ವಿ ಸೂರ್ಯ ವಿರೋಧಿಸಿದ್ದು, ಇದು ಅಸಾಂವಿಧಾನಿಕವಾಗಿದೆ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ಮೀಸಲಾತಿ ಹಿಂಪಡೆಯಬೇಕು. ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ. ವೋಟ್ ಬ್ಯಾಂಕ್ ರಾಜಕಾರಣವನ್ನು ಅಂಬೇಡ್ಕರ್ ವಿರೋಧಿಸಿದ್ದರು. ಕಾಂಗ್ರೆಸ್ ಕೇವಲ ಮುಸ್ಲಿಮರ ಬಗ್ಗೆ ಯೋಚನೆ ಮಾಡುತ್ತೆ. ದಲಿತರು, ಒಬಿಸಿ ಬಗ್ಗೆ ಕಾಂಗ್ರೆಸ್ ನಾಯಕರು ಚಿಂತನೆ ಮಾಡಲ್ಲ. ಧರ್ಮಾಧಾರಿತ ಮೀಸಲಾತಿ ಅಸಾಂವಿಧಾನಿಕ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕುಮ್ಮಕ್ಕಿನಿಂದ ಮೀಸಲಾತಿ ನೀಡಲಾಗಿದೆ. ಸಂಸತ್ನಲ್ಲಿ ಮತ್ತು ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಸರಕಾರದ ಈ ಪ್ರಸ್ತಾಪದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ವಾಗ್ದಾಳಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಸದರಾದ ಡಾ.ಮಂಜುನಾಥ್, ಪಿ.ಸಿ ಮೋಹನ್, ಬ್ರಿಜೇಶ್ ಚೌಟ ಭಾಗಿಯಾಗಿದ್ದರು.