6,6,6,6,6,6,6,6: ಆಕಾಶ್ ಆರ್ಭಟಕ್ಕೆ ದಾಖಲೆಗಳೇ ಧೂಳೀಪಟ
Arunachal Pradesh vs Meghalaya: ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಮೇಘಾಲಯ ತಂಡದ ಆಟಗಾರ ಆಕಾಶ್ ಚೌಧರಿ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಸ್ಪೋಟಕ ಅರ್ಧಶತಕದ ನೆರವಿನೊಂದಿಗೆ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಮೇಘಾಲಯ ತಂಡ 628 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ.
ಮೇಘಾಲಯ ತಂಡದ ಆಟಗಾರ ಆಕಾಶ್ ಚೌಧರಿ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯ ಪ್ಲೇಟ್ ಪಂದ್ಯದಲ್ಲಿ ಮೇಘಾಲಯ ಮತ್ತು ಅರುಣಾಚಲ ತಂಡಗಳು ಮುಖಾಮುಖಿಯಾಗಿದ್ದವು.
ಸೂರತ್ನಲ್ಲಿ ನಡೆದ ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಕಾಶ್ ಚೌಧರಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ…
🔸 ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಸಿಡಿಸಿದ ದಾಖಲೆ ಆಕಾಶ್ ಚೌಧರಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ಆಟಗಾರ ವೇಯ್ನ್ ವೈಟ್ ಹೆಸರಿನಲ್ಲಿತ್ತು. ವೇಯ್ನ್ ವೈಟ್ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಆಕಾಶ್ ಚೌಧರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
🔸 ಫಸ್ಟ್ ಕ್ಲಾಸ್ ಕ್ರಿಕೆಟ್ನಲ್ಲಿ ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ 2ನೇ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಸಹ ಆಕಾಶ್ ಚೌಧರಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರವಿ ಶಾಸ್ತ್ರಿ (1985) ಈ ಸಾಧನೆ ಮಾಡಿದ್ದರು.
🔸 ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಸಹ ಆಕಾಶ್ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ವೆಸ್ಟ್ ಇಂಡೀಸ್ನ ಗ್ಯಾರಿ ಸೋಬರ್ಸ್ ಹಾಗೂ ರವಿ ಶಾಸ್ತ್ರಿ ಮಾತ್ರ ಈ ಸಾಧನೆ ಮಾಡಿದ್ದರು.
🔸 ಕ್ರಿಕೆಟ್ ಇತಿಹಾಸದಲ್ಲೇ ಸತತ 8 ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಕೂಡ ಆಕಾಶ್ ಚೌಧರಿ ಪಾಲಾಗಿದೆ. ಲಿಮರ್ ದಾಬಿ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ ಆಕಾಶ್ ಆ ಬಳಿಕ ಮರು ಓವರ್ನ ಮೊದಲೆರಡು ಎಸೆತಗಳಲ್ಲಿ ಸಿಕ್ಸ್ ಸಿಡಿಸಿದ್ದರು. ಈ ಮೂಲಕ ಸತತ 8 ಸಿಕ್ಸ್ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.
🔸 ರಣಜಿ ಟೂರ್ನಿ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ದಾಖಲೆ ಕೂಡ ಆಕಾಶ್ ಚೌಧರಿ ಪಾಲಾಗಿದೆ. ಅದು ಕೂಡ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
🔸 ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 350 ಸ್ಟ್ರೈಕ್ ರೇಟ್ನಲ್ಲಿ ಅರ್ಧಶತಕಕ್ಕಿಂತಹ ಹೆಚ್ಚಿನ ರನ್ ಕಲೆಹಾಕಿದ ಭಾರತದ ಮೊದಲ ಬ್ಯಾಟರ್ ಎಂಬ ಭರ್ಜರಿ ದಾಖಲೆ ಕೂಡ ಆಕಾಶ್ ಚೌಧರಿ ಹೆಸರಿಗೆ ಸೇರ್ಪಡೆಯಾಗಿದೆ. ಈ ಪಂದ್ಯದಲ್ಲಿ 14 ಎಸೆತಗಳನ್ನು ಎದುರಿಸಿದ ಆಕಾಶ್ ಅಜೇಯ 50 ರನ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದಾರೆ.

