ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲ ಹಿಂದುಳಿದವರೇ; ಸಿದ್ದರಾಮಯ್ಯ ಬೇಸರ

Updated on: Sep 20, 2025 | 5:54 PM

ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು. ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಗದಗ, ಸೆಪ್ಟೆಂಬರ್ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು ಹಾಗೂ ಕೊಲೆ ಆದವರೆಲ್ಲಾ ಹಿಂದುಳಿದ ವರ್ಗಕ್ಕೆ ಸೇರಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಯವರ ಮಕ್ಕಳೇ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು? ಎಂದು ಅವರು ಪ್ರಶ್ನಿಸಿದ್ದಾರೆ. ಗದಗ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧ ಮಾಡುತ್ತಾರೆ. ಅವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 20, 2025 05:51 PM