ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರೇ ಗಮನಿಸಿ: ಈ ದಿನಗಳಂದು ಖಾಸಗಿ ವಾಹನಗಳ ಪ್ರವೇಶ ಇಲ್ಲ

Edited By:

Updated on: Jul 01, 2026 | 1:51 PM

ಆಷಾಢ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಭಕ್ತಾದಿಗಳು ಲಲಿತ ಮಹಲ್ ಬಳಿ ವಾಹನ ನಿಲ್ಲಿಸಿ, ಅಲ್ಲಿಂದ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಬೇಕು. ಭಕ್ತರ ಅನುಕೂಲಕ್ಕೆ ಮತ್ತು ವಿಐಪಿಗಳಿಂದ ಆಗುವ ತೊಂದರೆ ತಪ್ಪಿಸಲು ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು, ಜುಲೈ 1: ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಈ ವರ್ಷ ಜುಲೈ 17 ರಿಂದ ಆಗಸ್ಟ್ 7 ರ ಅವಧಿಯಲ್ಲಿ ವಿಶೇಷ ಪೂಜಾ ದಿನಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರವು ಸಭೆ ನಡೆಸಿ ಸಿದ್ಧತೆಗಳನ್ನು ಅಂತಿಮಗೊಳಿಸಿದೆ. ಸಚಿವರಾದ ಬಳಿಕ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದ ಯತೀಂದ್ರ ಸಿದ್ದರಾಮಯ್ಯ ನಂತರ ಅಧಿಕಾರಿಗಳ ಜತೆ ಸಭೆ ನಡೆಸಿದರು. ಡಿಸಿ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಪ್ರಾಧಿಕಾರದ ಕಾರ್ಯದರ್ಶಿ ರೂಪಾ, ಡಿಸಿಪಿ ಸುಂದರಾಜ್ ಸಭೆಯಲ್ಲಿ ಭಾಗಿಯಾದರು. ಆಷಾಢ ಶುಕ್ರವಾರದಲ್ಲಿ ಪಾರ್ಕಿಂಗ್ ವ್ಯವಸ್ಥೆ, ದರ್ಶನದ ವ್ಯವಸ್ಥೆ, ಮೂಲ ಸೌಕರ್ಯಗಳ ವ್ಯವಸ್ಥೆ ಕುರಿತಂತೆ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಿತು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ಮಾಹಿತಿ ನೀಡಿದ ಸಚಿವ ಯತೀಂದ್ರ, ‘ಕಳೆದ ಬಾರಿ ವಿಐಪಿಗಳ ಆಗಮನದಿಂದ ಸಾಮಾನ್ಯ ಮತ್ತು 300 ರೂಪಾಯಿ ಟಿಕೆಟ್ ಪಡೆದ ಭಕ್ತರಿಗೆ ತೊಂದರೆಯಾಗಿತ್ತು ಎಂಬ ದೂರಿನ ಮೇರೆಗೆ ಈ ಬಾರಿ ಸಮರ್ಪಕ ನಿರ್ವಹಣೆಗೆ ಒತ್ತು ನೀಡಲಾಗಿದೆ. ಮುಖ್ಯವಾಗಿ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಬೆಟ್ಟದ ಮೇಲಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ’ ಎಂದು ತಿಳಿಸಿದರು.

ಭಕ್ತರು ಖಾಸಗಿ ವಾಹನಗಳನ್ನು ಲಲಿತ ಮಹಲ್ ಬಳಿ ನಿಲ್ಲಿಸಬೇಕು. ಅಲ್ಲಿಂದ ಚಾಮುಂಡಿಬೆಟ್ಟಕ್ಕೆ ತೆರಳಲು ಕೆಎಸ್ಆರ್ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು. ಇದರಿಂದ ಸಾಮಾನ್ಯ ಭಕ್ತರು ಅನಗತ್ಯವಾಗಿ ಹೆಚ್ಚು ಸಮಯ ಕಾಯುವುದನ್ನು ತಪ್ಪಿಸಿ, ಸುಗಮವಾಗಿ ದೇವಿಯ ದರ್ಶನ ಪಡೆಯಲು ಸಾಧ್ಯವಾಗುತ್ತದೆ ಎಂದು ಯತೀಂದ್ರ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More