ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

Edited By:

Updated on: Jun 11, 2026 | 9:22 PM

ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಗ್ಯಾಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಶಬ್ರಾಜ್ (28) ಮತ್ತು ಶಬ್ರೀನ್ (24) ಎಂಬ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 11:50ರ ಸುಮಾರಿಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕ ಬ್ರೇಕ್ ಫೇಲ್ ಆದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾನೆ.

ಬೆಂಗಳೂರು, ಜೂ.11: ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗರಬಾವಿ ನಿವಾಸಿಗಳಾದ ದಂಪತಿ ಶಬ್ರಾಜ್ (28) ಮತ್ತು ಶಬ್ರೀನ್ (24) ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 11:50ರ ಸುಮಾರಿಗೆ ಗ್ಯಾಸ್ ತುಂಬಿದ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ. ದಂಪತಿ ಗೊರಗುಂಟೆಪಾಳ್ಯ ಸಿಗ್ನಲ್ ದಾಟಿ ಯಶವಂತಪುರ ಕಡೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗ್ಯಾಸ್ ಲಾರಿ ಚಾಲಕ ಬೊಮ್ಮರಾಜೇಗೌಡ (60) ತನಗೆ ಬ್ರೇಕ್ ಹಿಡಿಯಲಿಲ್ಲ ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿಸಿದ್ದಾನೆ. ಇನ್ನೊಂದು ವಾಹನವನ್ನು ತಪ್ಪಿಸಲು ಪ್ರಯತ್ನಿಸುವಾಗ ನಿಯಂತ್ರಣ ಕಳೆದುಕೊಂಡು ದಂಪತಿ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ದಂಪತಿ ಲಾರಿ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಡಿಸಿಪಿ ಅವರು ಹೇಳಿಕೆ ನೀಡಿದ್ದಾರೆ. ಚಾಲಕ ಮದ್ಯಪಾನ ಮಾಡಿದ್ದನೇ ಎಂಬ ಪ್ರಶ್ನೆಗೆ, ಪೊಲೀಸರು ಕೇವಲ ವಾಸನೆ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ನಿಖರ ಮಾಹಿತಿ ಪಡೆಯಲು ವೈದ್ಯಕೀಯ ಪರೀಕ್ಷೆಗಾಗಿ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕ ಬೊಮ್ಮರಾಜೇಗೌಡನನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More