ರಾಜಾಜಿನಗರದಲ್ಲಿ ಅವಘಡ: ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ

Edited By:

Updated on: Jun 26, 2026 | 1:51 PM

ರಾಜಾಜಿನಗರದಲ್ಲಿ ಬೈಕ್ ಸವಾರ ಸುರೇಶ್ ಅವರ ಮೇಲೆ ಒಣಗಿದ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಸುರೇಶ್ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಿರ್ಲಕ್ಷ್ಯ ಆರೋಪದ ಮೇಲೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ದೂರು ನೀಡಿದ್ದಾರೆ.

ಬೆಂಗಳೂರು, ಜೂನ್​​ 26: ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ, ಬೈಕ್ ಸವಾರ ಸುರೇಶ್ ಅವರ ಮೇಲೆ ಒಣಗಿದ ಮರದ ಕೊಂಬೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸುರೇಶ್ ಅವರು ತಮ್ಮ ದಿನನಿತ್ಯದ ಕೆಲಸ ಕಾರ್ಯಕ್ಕೆಂದು ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕೊಂಬೆ ಬಿದ್ದ ರಭಸಕ್ಕೆ ತಲೆಗೆ ಪೆಟ್ಟು ಬಿದ್ದು ರಸ್ತೆಗೆ ಬಿದ್ದ ಸುರೇಶ್ ಪ್ರಜ್ಞಾಹೀನರಾಗಿದ್ದಾರೆ. ಪ್ರಸ್ತುತ ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 50 ವರ್ಷದ ಸುರೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ತಲೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ವೈದ್ಯರು ಮುಂದಿನ 48 ಗಂಟೆಗಳ ಕಾಲ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಹಲವು ಒಣಗಿದ ಮರಗಳು ಮತ್ತು ಕೊಂಬೆಗಳಿದ್ದು, ಇವುಗಳನ್ನು ತೆರವುಗೊಳಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ನಂತರ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಒಂದಷ್ಟು ಕೊಂಬೆಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಈ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us