ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಬೆಂಗಳೂರಿನ ಯಲಹಂಕ ನ್ಯೂಟೌನ್‌ನಲ್ಲಿ ಧನಿ ಪ್ರಾಪರ್ಟೀಸ್ ಮಾಲೀಕ ಚರಣ್ ಅವರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಚೇರಿಗೆ ಬರುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು, ಪತ್ನಿಯ ಕಣ್ಣೆದುರೇ ಚರಣ್ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಂಗಳೂರು, ನವೆಂಬರ್ 13: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್‌ನಲ್ಲಿ ನಡೆದಿದೆ. ಧನಿ ಪ್ರಾಪರ್ಟೀಸ್ ಮಾಲೀಕ ಚರಣ್ (35) ಕೊಲೆಯಾದ ಉದ್ಯಮಿ. ಕಚೇರಿಗೆ ಬರುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚರಣ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಚರಣ್ ಅವರ ಕಚೇರಿ ಯಲಹಂಕ ನ್ಯೂ ಟೌನ್‌ನಲ್ಲಿ ಇದ್ದು, ಪತ್ನಿಯ ಕಣ್ಣೆದುರೇ ಹಂತಕರು ದಾಳಿ ನಡೆಸಿದ್ದಾರೆ. ಪತ್ನಿ ಗೋಳಾಡಿ ಕಿರುಚಾಡಿದರೂ ದುಷ್ಕರ್ಮಿಗಳು ದಾಳಿ ಮುಂದುವರಿಸಿದ್ದು, ಕುತ್ತಿಗೆ ಭಾಗಕ್ಕೆ ಲಾಂಗ್‌ನಿಂದ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚರಣ್ ಕೊನೆಯುಸಿರೆಳೆದಿದ್ದಾರೆ.
ಚರಣ್ ಮೂಲತಃ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹರಿಸಂದ್ರ ಗ್ರಾಮದ ನಿವಾಸಿಯಾಗಿದ್ದು, ಯಲಹಂಕದ ಕೋಗಿಲು ಸಮೀಪ ವಾಸವಾಗಿದ್ದರು. ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದ ಅವರು ರಾಮನಗರ, ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.
ಶುಕ್ರವಾರ ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಘಟನೆ ನಡೆದಿದ್ದು, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆಯ ಹಿಂದಿನ ಉದ್ದೇಶ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

