ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್ ದುಬೈಗೆ ಪರಾರಿ: ಬಿಜೆಪಿ ಶಾಸಕನಿಗಾಗಿ ಸಿಐಡಿ ತಲಾಶ್
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಬೆನ್ನಲ್ಲೇ ಬಿಜೆಪಿ ಶಾಸಕ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನಂತರ, ಅವರು ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಿದ್ದು, ಸಿಐಡಿ ಅವರ ಬಂಧನಕ್ಕೆ ಸಿದ್ಧತೆ ನಡೆಸಿದೆ.
ಬೆಂಗಳೂರು, ಫೆಬ್ರವರಿ 12: ಜುಲೈ 15ರಂದು ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ನಡೆದಿತ್ತು. ಜಾಗದ ವಿಚಾರಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿತ್ತು. ಪ್ರಕರಣದಲ್ಲಿ ಭೈರತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಭೈರತಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ಬೆಂಗಳೂರು ನಗರದಾದ್ಯಂತ ಶೋಧ ನಡೆಸಿದೆ. ಅವರು ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಭೈರತಿ ಬಸವರಾಜ್ ಪ್ರಸ್ತುತ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪೊಲೀಸರು ಅವರಿಗೆ ಲುಕ್ ಔಟ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಸಿಗದಿದ್ದರೆ, ಅವರು ಶರಣಾಗುವುದು ಅನಿವಾರ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
Follow Us
