ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ
ಕರ್ನಾಟಕದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಇತ್ತೀಚೆಗೆ ಗಣನೀಯವಾಗಿ ಹೆಚ್ಚಾಗಿದ್ದು, ಇತ್ತೀಚಿನ ಬೆಳವಣಿಗೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾನುವಾರ ಸಂಜೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇ ಮೇಲ್ ಮೂಲಕ ಬೆದರಿಕೆ ಬಂದಿದ್ದು, ಸದ್ಯ ಕಟ್ಟೆಚ್ಚರ ವಹಿಸಲಾಗಿದೆ.
ಹುಬ್ಬಳ್ಳಿ, ಜೂನ್ 30: ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಭಾನುವಾರ ಸಂಜೆ ಇ-ಮೇಲ್ ಸಂದೇಶ ಬಂದಿದ್ದು, ಕೆಲ ಕಾಲ ಆತಂಕದ ಸನ್ನಿವೇಶ ನಿರ್ಮಾಣವಾಯಿತು. ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಸಂದೇಶ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರ ತಪಾಸಣೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
ಇತ್ತೀಚೆಗೆ ಕರ್ನಾಟಕದಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿವೆ. ತಿಂಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡಲಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಸಂದೇಶ ಬಂದಿತ್ತು. ಅದಾದ ಕೆಲವು ದಿನಗಳ ನಂತರ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಬಂದಿತ್ತು. ಬೆಂಗಳೂರಿನ, ಹಾಸನದ, ಉಡುಪಿಯ ಕೆಲವು ಶಾಲೆಗಳಿಗೂ ಬೆದರಿಕೆ ಸಂದೇಶ ಬಂದಿತ್ತು.
ಇದನ್ನೂ ಓದಿ: ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ